

ಮಂಗಳೂರು: ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಈ ಪ್ರಕರಣದಲ್ಲಿ ಚೇಳ್ಯಾರು ನಿವಾಸಿ ದೀಪಕ್(33) ಮರಕಡ ಸಂದೀಪ್ ಶೆಟ್ಟಿ(38) ಬಂಧಿತರು. ಇವರಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು 31,000 ರೂ. ನಗದು ಹಾಗೂ 4 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ 1,11,000 ರೂ. ಆಗಿದೆ. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಮೊಬೈಲ್ ಫೋನ್‌ನಲ್ಲಿ ಬೆಟ್ಟಿಂಗ್ ಆ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನಲ್ಲಿ ಅದೃಷ್ಠದ ಆಟವಾದ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.