

ಶಿಗ್ಗಾಂವಿ: ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 60 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿ 13,400 ಹೆಕ್ಟೇರ್ ಬೆಳೆ ಹಾನಿಯಾದ ಬಗ್ಗೆ ಮಾಹಿತಿ ಬಂದಿದೆ. ಈಗಾಗಲೇ ಶೇ. 40ರಷ್ಟು ಬೆಳೆ ಹಾನಿಯ ಸಮೀಕ್ಷೆ ಮಾಡಲಾಗಿದ್ದು, ಉಳಿದದ್ದನ್ನು ಹತ್ತು ದಿನದಲ್ಲಿ ಸರ್ವೆ ಮಾಡಿ, ಪರಿಹಾರ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ಜೆ. ಜಗದೀಶ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಜಿಲ್ಲಾಧಿಕಾರಿ, ಜಿಪಂ ಸಿಇಒ, ಎಸಿ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲಾಧಿಕಾರಿ ಮತ್ತು ಸಿಇಒ ಜತೆ ಅಧಿಕಾರಿಗಳ ಸಭೆ ನಡೆಸಿ, ಯಾವೆಲ್ಲ ಕೆಲಸಗಳು ಪ್ರಗತಿಯಲ್ಲಿವೆ ಮತ್ತು ಹೆಚ್ಚುವರಿ ಕೆಲಸಗಳಿದ್ದರೆ, ಅವುಗಳ ವರದಿ ಪಡೆದು ಸಾರ್ವಜನಿಕರ ಅಹವಾಲು ಸ್ವೀಕರಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಗ್ಗಾಂವಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು.
ಈಗಾಗಲೇ ಕ್ಷೇತ್ರದಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳ ಸಂಪೂರ್ಣ ಮಾಹಿತಿ ನೀಡಲು ಸೂಚನೆ ನೀಡಿದ್ದೇನೆ. ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಕೂಡ ಆರ್ಜಿಎಚ್ಸಿಎಲ್ ಪೋರ್ಟಲ್ನಲ್ಲಿ ದಾಖಲಿಸಲಾಗುತ್ತಿದೆ. ಹಾನಿಗೊಳಗಾದ ಮನೆಗಳು ಎ ಮತ್ತು ಬಿ ವರ್ಗದಲ್ಲಿದ್ದರೆ ಹೊಸ ಮನೆ ಕಟ್ಟಿಕೊಳ್ಳಲು ಅವಕಾಶ ನೀಡಲಾಗುವುದು. ಮನೆಗಳ ಹಾನಿ ಪ್ರಮಾಣ ಸಿ ವರ್ಗದಲ್ಲಿದ್ದರೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು.
ಸಭೆಯ ನಂತರ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಾದ ರಮೇಶ ಕೋನರೆಡ್ಡಿ, ಮಲ್ಲೇಶಪ್ಪ ಹೊರಪೇಟಿ ಅವರ ಜತೆ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ, ಸಿಇಒ ಮಹಮ್ಮದ ರೋಷನ್, ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಸೀಲ್ದಾರ್ ಶಿವಾನಂದ ರಾಣೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ತುರಕಾಣಿ, ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ, ಶಿವರಾಜ ರಾಯಣ್ಣವರ, ಎಸ್.ಕೆ. ಅಕ್ಕಿ ಮತ್ತಿತರರು ಉಪಸ್ಥಿತರಿದ್ದರು.