

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಾಗಿರುವ ವಾಯುಭಾರ ಕುಸಿತದ ಪರಿಣಾಮ ಮೂರು ದಿನಗಳಿಂದ ಅಬ್ಬರಿಸುತ್ತಿರುವ ಮಳೆಗೆ ಇಡೀ ಉತ್ತರ ಕರ್ನಾಟಕ ತತ್ತರಿಸಿದೆ. ಬಿಟ್ಟೂ ಬಿಡದೆ ಸುರಿದ ಮಳೆಯಿಂದಾಗಿ ಸಾವಿರಾರು ಎಕರೆ ಬೆಳೆ ನೀರಿನಲ್ಲಿ ಕೊಚ್ಚಿಹೋಗಿದ್ದರೆ, ಸಾವಿರಕ್ಕೂ ಅಧಿಕ ಮನೆಗಳು ಹಾನಿಗೀಡಾಗಿ ಕುಸಿಯುವ ಆತಂಕದಲ್ಲಿದೆ. ಈ ಆಘಾತ ಸಾಲದೆಂಬಂತೆ ಬಾಗಲಕೋಟೆ, ರಾಯಚೂರು ಸೇರಿ 6 ಜಿಲ್ಲೆಗಳಲ್ಲಿ ಇನ್ನೂ 3 ದಿನ ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಸಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.
ವಿಜಯಪುರ ಜಿಲ್ಲೆಯಲ್ಲೇ ಮಳೆಯಿಂದಾಗಿ 128 ಮನೆಗಳಿಗೆ ಹಾನಿಯಾಗಿದೆ. ಯಾದಗಿರಿಯಲ್ಲಿ 87 ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಕೊಪ್ಪಳದಲ್ಲಿ 800 ಮನೆಗಳಿಗೆ ಹಾನಿಯಾಗಿವೆ. ಸಾವಿರಾರು ಹೆಕ್ಟರ್ ಬೆಳೆ ನಾಶವಾಗಿದೆ. ದಾವಣಗೆರೆಯಲ್ಲಿ 200 ಎಕರೆ ಮೆಕ್ಕೆಜೋಳ ಹಾಗೂ 50 ಎಕರೆ ಭತ್ತ ನೀರು ಪಾಲಾಗಿದ್ದು, ಬಳ್ಳಾರಿಯಲ್ಲಿ 40 ಹೆಕ್ಟೇರ್ ಬೆಳೆ ಕೊಚ್ಚಿ ಹೋಗಿದೆ. ಯಾದಗಿರಿ ಗುರುಸಣಗಿ ಬ್ಯಾರೇಜ್ನಿಂದ ಭೀಮಾ ನದಿಗೆ 40 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದ ನದಿ ಪಾತ್ರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ರಾಯಚೂರು ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ 91 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ದೇವದುರ್ಗ ತಾಲೂಕು ಹೂವಿನಹೆಡಗಿಯ ಶ್ರೀ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಮುಳುಗಡೆಯಾಗಿದೆ. ಹಲವೆಡೆ ಜಲಾವೃತಗೊಂಡು ಜನ ಸಂಚಾರ ಕಷ್ಟವಾಗಿದೆ. ಜಲಾಶಯಗಳು ತುಂಬಿ ಹರಿಯುತ್ತಿರುವುದರಿಂದ ಪ್ರವಾಹಭೀತಿ ಶುರುವಾಗಿದೆ. ಕರಾವಳಿ ತೀರದಲ್ಲಿ ಗಂಟೆಗೆ 40-45 ಕಿಮೀ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.
ಪೂರ್ವದಿಂದ ಪಶ್ಚಿಮ ದಿಕ್ಕಿನ ಕಡೆ ಮಾರುತಗಳು ಚಲಿಸುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತ ಗೋವಾ ಮತ್ತಿತರ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಇದರ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಆದರೆ, ಒಂದು ವೇಳೆ ಗಾಳಿಯ ವೇಗ ಹೆಚ್ಚಾದರೆ ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.
ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಮುಂದಿನ 48 ಗಂಟೆ ಹಾಗೂ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಅ.15ರಂದು ವ್ಯಾಪಕ ಮಳೆಯಾಗಲಿದೆ. ಈ ಅವಧಿಯಲ್ಲಿ 204.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಮುಂದಿನ 24 ಗಂಟೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಮತ್ತು ತುಮಕೂರಿನಲ್ಲಿ ಅ.14ರಂದು ಯೆಲ್ಲೋ ಅಲರ್ಟ್ ಇರಲಿದೆ.
ವಿಜಯವಾಡ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರ ಪ್ರದೇಶ, ತೆಲಂಗಾಣದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈವರೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ವಿಶಾಖಪಟ್ಟಣದ ನರ್ಶಿಪಟ್ಟಣಂ-ತೂನಿ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ. ವಿಜಯವಾಡದ ಇಂದ್ರಕೀಳಾದ್ರಿಯಲ್ಲಿ ಭೂಕುಸಿತ ಉಂಟಾಗಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಶ್ರೀಕಾಕುಳಂ, ವಿಶಾಖಪಟ್ಟಣ, ವಿಜಯನಗರಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ. ಆದ್ದರಿಂದ ಸಮರೋಪಾದಿಯಲ್ಲಿ ಕೆಲಸ ಮಾಡಲು ಜಿಲ್ಲಾಡಳಿತ ಮುಂದಾಗಬೇಕೆಂದು ಸೂಚಿಸಿದ್ದಾರೆ.
ಅತಿವೃಷ್ಟಿ ಹಾನಿ ಮತ್ತು ಪರಿಹಾರೋಪಾಯ ಕ್ರಮಗಳ ಬಗ್ಗೆ ವರದಿ ತರಿಸಿಕೊಂಡು ಮೇಲುಸ್ತುವಾರಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೂ ಸೂಚಿಸಿದ್ದಾರೆ. ಸಂಬಂಧಿಸಿದ ಜಿಲ್ಲಾ ಸಚಿವರು, ಪ್ರವಾಹ ಹಾನಿ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಖುದ್ದು ಸಿಎಂ ತಿಳಿಸಿದ್ದಾರೆಂದು ಮುಖ್ಯಮಂತ್ರಿಗಳ ಸಚಿವಾಲಯ ತಿಳಿಸಿದೆ.