ಮಾದಪ್ಪನ ಸನ್ನಿಧಿಯಲ್ಲಿ ಭಕ್ತರ ದಂಡು

16 HANUR 4
Published on

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಸೋಮವಾರ ಸರ್ಕಾರಿ ರಜೆ ಇದ್ದ ಕಾರಣ ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು.


ಸೆ.14ರ ಎರಡನೇ ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಮ.ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದರು. ಜತೆಗೆ ಸೋಮವಾರವೂ ಈದ್ ಮಿಲಾದ್ ಸರ್ಕಾರಿ ರಜೆ ಇದ್ದ ಕಾರಣ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಕನಕಪುರ ಹಾಗೂ ಇನ್ನಿತರ ಕಡೆಗಳಿಂದ ಸಾವಿರಾರು ಭಕ್ತರು ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಮಾದಪ್ಪನ ಸನ್ನಿಧಿಗೆ ಭೇಟಿ ನೀಡಿದ್ದರು. ಹಾಗಾಗಿ ಸರಣಿ ಸರ್ಕಾರಿ ರಜೆ ಇದ್ದ ಕಾರಣ ಕಳೆದ 3 ದಿನಗಳಿಂದ ಮ.ಬೆಟ್ಟಕ್ಕೆ ಭಕ್ತರ ದಂಡೇ ಹರಿದುಬಂತು. ಕಾರು ಹಾಗೂ ಖಾಸಗಿ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು. ಬಸ್‌ಗಳು ಭಕ್ತರಿಂದ ಕಿಕ್ಕಿರಿದು ತುಂಬಿದ್ದವು.


ಆಗಮಿಸಿದ ಬಹುತೇಕ ಭಕ್ತರು ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರಲ್ಲದೆ, ಕೆಲ ಭಕ್ತರು 500 ರೂ.ಟಿಕೆಟ್ ಪಡೆದು ರಾಜಗೋಪುರದ ವಿಶೇಷ ಕೌಂಟರ್ ಮೂಲಕ ತೆರಳಿ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.


ಹರಕೆ ಹೊತ್ತ ಭಕ್ತರು ಹುಲಿ, ರುದ್ರಾಕ್ಷಿ ಹಾಗೂ ಬಸವ ಉತ್ಸವಾಧಿ ಸೇವೆಗಳಲ್ಲಿ ಭಾಗಿಯಾಗಿದ್ದರು. ಚಿನ್ನದ ತೇರನ್ನು ಎಳೆಸಿ ಪುನೀತರಾದರು.
ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದು, ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಘೋಷಣೆಗಳು ಮೊಳಗಿದವು.
ಕೆಲವರು ಮುಡಿಸೇವೆ, ಪಂಜಿನ ಸೇವೆ, ರಜಾಸೇವೆಯನ್ನು ನೆರವೇರಿಸಿ ಹರಕೆ ತೀರಿಸಿದರು.


ಆಗಮಿಸಿದ ಭಕ್ತರಿಗೆ ಶ್ರೀಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ದಾಸೋಹ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಇನ್ನಿತರ ಅಗತ್ಯ ಸೌಕರ್ಯವನ್ನು ಒದಗಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net