

ಶನಿವಾರಸಂತೆ: ಪ್ರತಿಯೊಬ್ಬರೂ ಇರುವುದರಲ್ಲಿ ತೃಪ್ತಿಯ ಮನೋಭಾವ ಬೆಳೆಸಿಕೊಂಡರೆ ನೆಮ್ಮದಿಯ ಜೀವನ ನಡೆಸಬಹುದು ಎಂದು ಅಂಕನಹಳ್ಳಿ ಶ್ರೀ ತಪೋವನ ಮನೆಹಳ್ಳಿ ಕ್ಷೇತ್ರದ ಮಠಾಧೀಶ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಸೋಮವಾರಪೇಟೆ ತಾಲೂಕು ಶನಿವಾರಸಂತೆ ವಲಯದ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಸಮಿತಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಕೌಟುಂಬಿಕ ಸೌಹಾರ್ಧತೆ ಹಾಗೂ ಗ್ರಾಮ ಸುಭೀಕ್ಷೆಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ವಲಯ ಮಟ್ಟದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ನಂತರ ಹಮ್ಮಿಕೊಂಡಿದ್ದ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಯಕದಿಂದ ಜೀವನ ಹಸನಾಗುತ್ತದೆ ಜೀವನದಲ್ಲಿ ಇರುವುದರಲ್ಲೇ ತೃಪ್ತಿ ಪಡೆದುಕೊಂಡರೆ ಸಂತೃಪ್ತಿಯ ಜೀವನ ಸಾಗಿಸಬಹುದು ಎಂದರು.
ಆಧುನಿಕತೆ ಹೆಸರಿನಲ್ಲಿ ವೇಗವಾಗಿ ಸಾಗುತ್ತಿರುವ ಸಮಾಜಕ್ಕೆ ಧಾರ್ಮಿಕ ಕಾರ್ಯಕ್ರಮಗಳ ಅಗತ್ಯತೆ ಹೆಚ್ಚಿದೆ ಎಂದರು.
ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯ ಶಿಕ್ಷಕ ಕೆ.ಪಿ.ಜಯಕುಮಾರ್ ಮಾತನಾಡಿ, ಸ್ವಚ್ಛ ಮನಸ್ಸಿನಿಂದ ಸಮಾಜವನ್ನು ಸರಿದಾರಿಗೆ ತರಲು ಸಾಧ್ಯವಿದೆ. ಪ್ರತಿಯೊಬ್ಬರೂ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸ್ವಚ್ಛವಾಗಿಟ್ಟುಕೊಳ್ಳಬೆಕು. ಮನುಷ್ಯನಿಗೆ ಹಣ ಆಸ್ತಿಗಳಿಸುವುದೇ ಗುರಿಯಾಗದೆ ಸಮಾಜಮುಖಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಹಲವು ಸಮಾಜಮುಖಿ ಕಾರ್ಯಕ್ರಮಗಳ ಮುಖಾಂತರ ಜನಸಾಮಾನ್ಯರಿಗೆ ದಾರಿ ದೀಪವಾಗಿದೆ. ಯುವ ಜನತೆಯಲ್ಲಿ ಸಂಸ್ಕಾರ ಕಲಿಸಲು ಇದು ಸಹಕಾರಿಯಾಗಿದೆ ಎಂದರು.
ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಎಚ್.ರೋಹಿತ್ ಮಾತನಾಡಿದರು. ಕಾಳಿಕಾಂಬ ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಬಿ.ನಾಗರಾಜು, ಹಿರಿಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಿ.ಎಲ್.ಸುಬ್ಬಯ್ಯ, ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಎಸ್.ಪಿ.ಭಾಗ್ಯ, ಗ್ರಾ.ಪಂ.ಅಧ್ಯಕ್ಷೆ ಗೀತಾ ಹರೀಶ್, ಮಧ್ಯವರ್ಜನ ಶಿಬಿರ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ರಕ್ಷಿತ್‌ಗೌಡ, ಎಸ್.ಎಸ್.ದಿವಾಕರ್, ಸಿ.ಜೆ.ಗಿರೀಶ್, ನಾಗರಾಜ್ ಇತರರು ಇದ್ದರು.