ಪಠ್ಯದ ಜತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಿ: ಶಾಸಕ ಸುರೇಶ್‌ಗೌಡ ಸಲಹೆ

Nagamangala
Published on

ನಾಗಮಂಗಲ: ಪಠ್ಯದಿಂದಲೇ ಸಾಧಿಸುತ್ತೇನೆ ಎನ್ನುವ ಬದಲಿಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಿದರೆ ಏನನ್ನಾದರೂ ಸಾಧಿಸಲು ಸಾಧ್ಯವೆಂದು ಶಾಸಕ ಸುರೇಶ್‌ಗೌಡ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಸಾಂಸ್ಕೃತಿಕ, ಕ್ರೀಡಾ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಅಕ್ಷರ ಕಲಿಯುವುದಕ್ಕೆ ಸೀಮಿತವಾಗಬಾರದು. ವಿದ್ಯೆಯಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ನೀಡಬೇಕು. ಪಠ್ಯವನ್ನೇ ನಂಬಿ ಕುಳಿತರೆ ನಿರುದ್ಯೋಗ ಕಟ್ಟಿಟ್ಟ ಬುತ್ತಿ ಎಂದರು.
ವಿದ್ಯಾರ್ಥಿ ಜೀವನದಲ್ಲಿಯೇ ಕ್ರೀಡೆಯಿಂದ ಭವಿಷ್ಯ ಕಲ್ಪಿಸಿಕೊಳ್ಳಬಹುದು. ದೇಶದಲ್ಲಿ ಸಾವಿರಾರು ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಂದ ಸರ್ಕಾರಿ ನೌಕರಿ ಪಡೆದಿದ್ದಾರೆ. ಕ್ರೀಡೆಗೆ ದೇಶದಲ್ಲಿ ಮಹತ್ವವಿದ್ದು, ವಿದ್ಯಾರ್ಥಿಗಳು ಅರಿಯಬೇಕು ಎಂದು ತಿಳಸಿದರು.
ಕ್ಷೇತ್ರಶಿಕ್ಷಣಾಧಿಕಾರಿ ಸುರೇಶ್ ಮಾತನಾಡಿ, ಕ್ರೀಡೆ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿ ತನ್ನಿಂದ ತಾನೇ ಬರುತ್ತದೆ. ಪ್ರತಿ ವಿದ್ಯಾರ್ಥಿಯೂ ಒಂದಲ್ಲ ಒಂದು ಕ್ರೀಡೆಯಲ್ಲಿ ಆಸಕ್ತಿ ಹೊಂದಿರುತ್ತಾರೆ. ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕ್ರೀಡೆ ಸಹಕಾರಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net