

ಇಳಕಲ್ಲ (ಗ್ರಾ): ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಅಧಿಕವಾಗುತ್ತಿದ್ದು ಅಧಿಕಾರಿಗಳು, ವೈದ್ಯರು ಏನು ಮಾಡುತ್ತಿದ್ದಾರೆ ಎಂದು ಜನತೆ ದೂರುತ್ತಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲೇಕೆ ರೋಗಿಗಳು ದಾಖಲಾಗುತ್ತಿಲ್ಲ? ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಸೋಮವಾರ ತಹಸೀಲ್ದಾರ ಕಚೇರಿಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ತರುವ ನಿಟ್ಟಿನಲ್ಲಿ ಕರೆಯಲಾಗಿದ್ದ ಅವಳಿ ತಾಲೂಕಿನ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳ ತುರ್ತು ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕರು ಮಾತನಾಡಿದರು.
ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಗಳಿಗೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟ ಅವರು, ಆದಷ್ಟು ಬೇಗನೆ ಡೆಂಗ್ಯೂ ನಿಯಂತ್ರಣಕ್ಕೆ ತನ್ನಿ. ಸ್ವಚ್ಛತೆ ಕುರಿತು ಜಾಗತಿ ಮೂಡಿಸಿ. ಡೆಂಗ್ಯೂ ಜ್ವರದ ಕುರಿತು ತಾಲೂಕಿನಾದ್ಯಂತ ಜಾಗತಿ ಮೂಡಿಸಿ, ಉತ್ತಮ ಚಿಕಿತ್ಸೆ ನೀಡಿ ಎಂದು ಸೂಚಿಸಿದರು.
ಸಭೆಯಲ್ಲಿ ತಹಸೀಲ್ದಾರ ಸತೀಶ್ ಕೂಡಲಗಿ, ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ್, ಅವಳಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.