

ಚಿಕ್ಕಮಗಳೂರು: ಅಂಬೇಡ್ಕರ್ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸುತ್ತಮುತ್ತ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಅಂಬೇಡ್ಕರ್ ಪ್ರತಿಮೆ ಕಾಮಗಾರಿ ಸ್ಥಗಿತಗೊಂಡಿರುವುದನ್ನು ಮನಗಂಡು ಕೆಲವರು ಆ ಜಾಗವನ್ನು ಅನೈತಿಕ ಚಟುವಟಿಕೆಗಳ ತಾಣವಾಗಿಸಿಕೊಂಡಿದ್ದಾರೆ. ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವಿಳಂಬ ಮಾಡುವ ಮೂಲಕ ನಗರಸಭೆಯಿಂದಲೇ ಅಂಬೇಡ್ಕರ್‌ಗೆ ಅವಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಮೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲು ಹೊದಿಕೆ ಹಾಕಲಾಗಿದೆ. ಈ ಹೊದಿಕೆ ಒಳ ಭಾಗದಲ್ಲಿ ಕೆಲವರು ಮದ್ಯ ಸೇವನೆ ಮಾಡುತ್ತಿದ್ದಾರೆ. ಕೆಲ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವ ಮೂಲಕ ಆ ಜಾಗವನ್ನು ಅಪವಿತ್ರಗೊಳಿಸುತ್ತಿದ್ದಾರೆ ಎಂದು ದೂರಿದರು.
ಪ್ರತಿಮೆ ನಿರ್ಮಾಣ ವಿಳಂಬಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರನ್ನು ಪ್ರಶ್ನಿಸಿದರೆ ಕಾಮಗಾರಿಗೆ ಇನ್ನೂ ಆನುದಾನ ಬಿಡುಗಡೆಯಾಗಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಜವಾಬ್ದಾರಿಯಿಂದ ನುಣುಚಿಕೊಳ್ಳದೆ ನಗರಸಭೆ ಹಾಗೂ ಗುತ್ತಿಗೆದಾರರು ಕೂಡಲೇ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು, ಪ್ರತಿಮೆ ನಿರ್ಮಾಣದ ಸ್ಥಳದ ಸುತ್ತಲೂ ಸ್ವಚ್ಛತೆ ಕಾಪಾಡಬೇಕು, ಕೂಡಲೇ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು, ತಾಲೂಕು ಸಂಚಾಲಕ ಸತೀಶ್ ಕೂದುವಳ್ಳಿ, ಸಹ ಸಂಚಾಲಕ ಪ್ರಸನ್ನ ಹಾದಿಹಳ್ಳಿ, ಮುಖಂಡ ವೆಂಕಟೇಶ್ ಮತ್ತಿತರರಿದ್ದರು.