ಜನಿವಾರ ಕತ್ತರಿಸಿ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗೆ ಧಕ್ಕೆ

protest
ಕುಂದಾಪುರ ಉಪವಿಭಾಗಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.
Published on

ಕುಂದಾಪುರ: ರಾಜ್ಯದ ಕೆಲವು ಕಡೆಗಳಲ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ದೈಹಿಕ ತಪಾಸಣೆ ವೇಳೆ ವಿದ್ಯಾರ್ಥಿಗಳು ಹಾಕಿಕೊಂಡಿದ್ದ ಜನಿವಾರವನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳು ದುರುದ್ದೇಶಪೂರ್ವಕವಾಗಿ ವಿದ್ಯಾರ್ಥಿಗಳ ಇಚ್ಛೆಗೆ ವಿರುದ್ಧವಾಗಿ ಕತ್ತರಿಸಿರುವುದು ಖಂಡನೀಯ. ವಿದ್ಯಾರ್ಥಿಗಳ ಧಾರ್ಮಿಕ ಭಾವನೆ ಹಾಗೂ ಮಾನಸಿಕವಾಗಿ ಘಾಸಿ ಮಾಡಿದ್ದಾರೆ ಎಂದು ಪ್ರಮುಖರಾದ ಸುಬ್ರಹ್ಮಣ್ಯ ಹೊಳ್ಳ ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿಪ್ರ ಸಮುದಾಯದ ವಿದ್ಯಾರ್ಥಿಗಳಿಗೆ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ವತಿಯಿಂದ ಕುಂದಾಪುರ ಉಪವಿಭಾಗಾಧಿಕಾರಿ ಕಚೇರಿ ಎದುರು ಗುರುವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಅಧಿಕಾರಿಗಳ ಈ ಕೃತ್ಯದಿಂದ ವಿದ್ಯಾರ್ಥಿಗಳಿಗೆ, ಯಜ್ಞೋಪವೀತ ಧಾರಣೆಯ ನಂಬಿಕೆಯುಳ್ಳ ಸಮುದಾಯದವರ ಭಾವನೆಗೆ ಘಾಸಿ ಉಂಟು ಮಾಡಿದೆ. ಈ ಘಟನೆಯಿಂದ ಬ್ರಾಹ್ಮಣ ಸಮುದಾಯಕ್ಕೆ ನೋವುಂಟಾಗಿದ್ದು, ಧಾರ್ಮಿಕ ಭಾವನೆಗೆ ಅವಮಾನ ಮಾಡಿದಂತಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ದೇಶಕ್ಕೆ ಒಂದು ಕಪ್ಪುಚುಕ್ಕೆಯಾಗಿದೆ. ಇಂತಹ ಘಟನೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಹಿಂದೂಗಳೆಲ್ಲ ಒಗ್ಗಟ್ಟಾಗಬೇಕು ಎಂದರು. ಪ್ರಭಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಎಸ್.ಕೃಷ್ಣಾನಂದ ಚಾತ್ರ, ಪ್ರಧಾನ ಕಾರ್ಯದರ್ಶಿ ವಾದಿರಾಜ ಹೆಬ್ಬಾರ್, ಯುವ ವಿಪ್ರ ವೇದಿಕೆ ಅಧ್ಯಕ್ಷೆ ಪವಿತ್ರಾ ಅಡಿಗ, ಮಹಿಳಾ ವೇದಿಕೆ ಅಧ್ಯಕ್ಷೆ ಭಾರ್ಗವಿ ಭಟ್ ಬೆಳ್ವೆ, ಯುವ ವೇದಿಕೆ ಅಧ್ಯಕ್ಷ ಕೇಶವ ಅಡಿಗ ಬಸ್ರೂರು, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್, ರಾಘವೇಂದ್ರ ಅಡಿಗ, ಸಂದೇಶ ಭಟ್, ವಿಪ್ರವಾಣಿ ಸಂಪಾದಕ ಶಂಕರ ರಾವ್ ಕಾಳಾವರ ಮೊದಲಾದವರು ಉಪಸ್ಥಿತರಿದ್ದರು.

ಬ್ರಾಹ್ಮಣರ ಏಳಿಗೆ ಸಹಿಸಲಾಗದೆ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದಂತೆ ನೋಡಿಕೊಳ್ಳುವ ದುರುದ್ದೇಶದಿಂದ ರಾಜ್ಯದ ಮೂರ‌್ನಾಲ್ಕು ಕಡೆಗಳಲ್ಲಿ ಜನಿವಾರ ತುಂಡು ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ಇದರಿಂದ ಇಡೀ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದೆ. ಈ ಘಟನೆಗೆ ಕಾರಣರಾದವರಿಗೆ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು. ಸರ್ಕಾರ ಸ್ಪಂದಿಸದಿದ್ದಲ್ಲಿ, ಸರಿಯಾದ ಉತ್ತರ ದೊರೆಯದಿದ್ದಲ್ಲಿ ಬ್ರಾಹ್ಮಣ ಸಂಘಟನೆ ಮೂಲಕ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಶಂಕರ ರಾವ್ ಕಾಳಾವರ, ವಿಪ್ರವಾಣಿ ಸಂಪಾದಕ https://www.vijayavani.net/life-experience-is-the-greatest-wisdom https://www.vijayavani.net/villagers-oppose-sewage-treatment-plant

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net