

ಮಂಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಗೃಹ ಇಲಾಖೆಯು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಕಠಿಣ ಕಾನೂನು ಜಾರಿಗೊಳಿಸಲು ಸಮಿತಿ ರಚಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬ್ಯಾಂಕ್ ಖಾತೆ ವಂಚನೆ, ಹ್ಯಾಕಿಂಗ್, ಸುಳ್ಳು ಸುದ್ದಿ, ವೈಯಕ್ತಿಕ ಖಾತೆಗೆ ಅವಹೇಳನಕಾರಿ ಪೋಸ್ಟ್‌ಗಳನ್ನು ಕಳುಹಿಸುವುದು ಸೇರಿದಂತೆ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ತಡೆಗಟ್ಟಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ಸೈಬರ್ ಕ್ರೈಂ ಠಾಣೆ ಆರಂಭಿಸಲಾಗಿತ್ತು. ಬಳಿಕ ಎಲ್ಲಾ ಜಿಲ್ಲೆಗಳಲ್ಲೂ ಠಾಣೆಗಳು ಆರಂಭಗೊಂಡು ಈಗ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗುತ್ತಿವೆ.
ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಿದ ಬಳಿಕ ಎಇಪಿಎಸ್ ಮೂಲಕ ಹಣ ವರ್ಗಾವಣೆ ಆಗುತ್ತಿದೆ ಎಂಬ ದೂರಿನ ಕುರಿತಂತೆ ತನಿಖೆ ನಡೆಯುತ್ತಿದೆ. ಮಂಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಿಂದ ಎಇಪಿಎಸ್ ಮೂಲಕ ಹಣ ವಂಚನೆಗೆ ಸಂಬಂಧಿಸಿ ಬಿಹಾರ ಮೂಲದ ಮೂರು ಆರೋಪಿಗಳನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಪ್ರತಿಕ್ರಿಯಿಸಿದರು.