ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ

devaraj aras
Published on

ಮಡಿಕೇರಿ: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಳುವವನೆ ಭೂಮಿಯ ಒಡೆಯ, ಜೀತ ಪದ್ಧತಿ ನಿರ್ಮೂಲನೆ, ವಿದ್ಯಾರ್ಥಿ ನಿಲಯ ಸ್ಥಾಪನೆ, ಹಿಂದುಳಿದ ವರ್ಗಗಳಿಗೆ ನ್ಯಾಯ, ಎಲೆಕ್ಟ್ರಾನಿಕ್ ಸಿಟಿ ಆರಂಭ ಹೀಗೆ ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ತುಂಬಾ ದೂರದೃಷ್ಟಿಯಿಂದ ಆಡಳಿತವನ್ನು ನಡೆಸಿ, ಇಂದಿಗೂ ಸಹ ಜನಮನ್ನಣೆ ಉಳಿಸಿಕೊಂಡಿರುವುದು ಸಾಕ್ಷಿ ಪ್ರಜ್ಞೆ ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ತಿಳಿಸಿದರು.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ೧೧೦ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪ್ರತಿಯೊಂದು ಸಮಾಜಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಲು ಸಾಕಷ್ಟು ಶ್ರಮಿಸಿದ್ದಾರೆ. ಇಂತಹ ಮಹನೀಯರ ಆದರ್ಶ ಮತ್ತು ಸಾಧನೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಸಮ ಸಮಾಜ ನಿರ್ಮಾಣ ಹಾಗೂ ಸುಧಾರಣೆಗೆ ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಡಿ.ದೇವರಾಜ ಅರಸು ಅವರ ಮೌಲ್ಯ ಮತ್ತು ದಾರ್ಶನಿಕತೆಯನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಸಾಮಾಜಿಕ ನ್ಯಾಯಕ್ಕಾಗಿ ಕಾನೂನನ್ನು ತಿದ್ದುಪಡಿ ಮಾಡಿ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಲು ಶ್ರಮಿಸಿದ್ದಾರೆ. ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಇರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಹಾನ್ ವ್ಯಕ್ತಿಯಾಗಿ ರೂಪುಗೊಂಡರು. ಭವಿಷ್ಯದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿರುವ ಡಿ.ದೇವರಾಜ ಅರಸು ಅವರು ಹಲವು ಯೋಜನೆಗಳನ್ನು ಜಾರಿಗೊಳಿಸಿ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದಾರೆ ಎಂದು ವಿವರಿಸಿದರು.

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಕೆ.ಸಿ.ದಯಾನಂದ ಮಾತನಾಡಿ, ಡಿ.ದೇವರಾಜ ಅರಸು ಅವರು ಸಾಮಾಜಿಕ ಸುಧಾರಣೆಯ ಮತ್ತು ಹಿಂದುಳಿದ ವರ್ಗಗಳ ಹರಿಕಾರ. ಕನ್ನಡ ನಾಡಿನ ಅಪ್ರತಿಮ ಹೋರಾಟದ ಮುಖ್ಯಮಂತ್ರಿಯಾಗಿ ರಾಜಕೀಯ ನಾಯಕತ್ವ ಗುಣ ಹೊಂದಿದ್ದರು. ಸಾಮಾಜಿಕ ಸುಧಾರಣೆ ಮತ್ತು ಬದಲಾವಣೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ೧೯೫೨ ರಲ್ಲಿ ವಿಧಾನಸಭೆ ಪ್ರವೇಶ ಮಾಡಿದ ಡಿ.ದೇವರಾಜ ಅರಸು ಅವರು ರಾಜಕೀಯ ಕ್ಷೇತ್ರದಲ್ಲಿ ಸಚಿವ ಹಾಗೂ ಮುಖ್ಯಮಂತ್ರಿ ಆಗಿ ಶ್ರೇಷ್ಠ ಆರ್ಥಿಕ ತಜ್ಞರಾಗಿ ಸಮಾನತೆಯ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್ ಮಾತನಾಡಿ, ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅತ್ಯುತ್ತಮ ಆಡಳಿತ ನೀಡಿದ ಜನಸೇವಕ, ಹಿಂದುಳಿದ ವರ್ಗಗಳ ಆಶಾ ಕಿರಣ ಹಾಗೂ ಬೆಳಕು ಎಂದು ನುಡಿದರು.

ಡಿ.ದೇವರಾಜ ಅರಸು ಅವರು ಸಮಾಜ ಮುಖಿಯಾಗಿ ಕೆಲಸ ಮಾಡಿ ಶ್ರಮಿಸಿದ್ದಾರೆ ಎಂದು ನುಡಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾದ ಕವಿತಾ ಅವರು ಬೋಧಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ತಹಶೀಲ್ದಾರ್ ಶ್ರೀಧರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ವ್ಯವಸ್ಥಾಪಕರಾದ ಶಿವಶಂಕರ, ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಮೋಹನ್ ಕುಮಾರ್, ಇತರರು ಇದ್ದರು. ಕೆ.ಆರ್.ಭಾರತಿ ನಿರೂಪಿಸಿದರು, ಶ್ರೀಕಾಂತ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net