

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗಿರಲಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಮಂಗಳವಾರ ಅರಸು ಅವರ 110 ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯಿಂದ ಆ.20 ರಂದು ಬೆಳಗ್ಗೆ 11 ಕ್ಕೆ ನಗರದ ಚಳ್ಳಕೆರೆ ರಸ್ತೆ ಎಸ್‌ಜಿ ಕಲ್ಯಾಣ ಮಂಟಪದಲ್ಲಿ ಅರಸು ಅವರ 110 ನೇ ಜನ್ಮದಿನವನ್ನು ಆಚರಿಸಲಾಗುವುದು. ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪುಷ್ಪಲತಾ ಮಾತನಾಡಿ, ಅರಸು ಅವರ ಜೀವನ ಮತ್ತು ಸಾಧನೆಗಳ ಕುರಿತು ಲೇಖಕ ಎಚ್.ಆನಂದ್‌ಕುಮಾರ್ ಉಪನ್ಯಾಸ ನೀಡಲಿದ್ದು, ಹಿಂದುಳಿದ ವರ್ಗಗಳ ಇಲಾಖೆ ವಿದ್ಯಾರ್ಥಿನಿಲಯಗಳಲ್ಲಿದ್ದು ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.
ಅಲೆಮಾರಿ, ಅರೆ ಅಲೆಮಾರಿ ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮೀಕಾಂತ್ ಯಾದವ್, ಗೌರವಾಧ್ಯಕ್ಷ ರಾಮು ಗೋಸಾಯಿ, ಡಿಡಿಪಿಐ ಎಂ.ಆರ್.ಮಂಜುನಾಥ್, ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್, ಮುಖ್ಯ ಪಶುವೈದ್ಯಾಧಿಕಾರಿ ಡಾ.ಎನ್.ಗಿರಿರಾಜ್ ಇದ್ದರು.
-----