

ಮಂಡ್ಯ: ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮದಿನವನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೂ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದರು.
ಜನ್ಮ ದಿನಾಚರಣೆ ಅಂಗವಾಗಿ ಡಿ.ದೇವರಾಜ ಅರಸು ಅವರ ಅಪರೂಪದ ಭಾವಚಿತ್ರಗಳನ್ನು ಪ್ರದರ್ಶನ ಮಾಡಲಾಗುವುದು. ಅವರ ಪುಸ್ತಕಗಳನ್ನು ಸಹ ಪ್ರದರ್ಶನ ಮಾಡಲಾಗುವುದು. ಅಂತೆಯೇ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು. ಅರಸು ಜನ್ಮದಿನಾಚರಣೆಯನ್ನು ತಾಲೂಕು ಮಟ್ಟದಲ್ಲೂ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಡಿ.ದೇವರಾಜು ಅರಸು ಅವರ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿ, ವಿಜೇತರಾದವರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು. ಜಿಲ್ಲೆಯಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ನಿಲಯ ಗುರುತಿಸಿ ವಾರ್ಡನ್‌ಗಳನ್ನು ಸನ್ಮಾನಿಸಿ. ಅಂತೆಯೇ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ನಿಲಯದಲ್ಲಿ ವ್ಯಾಸಂಗ ಮಾಡಿ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ, ಡಿವೈಎಸ್ಪಿ ಲಕ್ಷ್ಮೀಕಾಂತ್ ಪ್ರಸಾದ್, ಜಿಪಂ ಯೋಜನಾಧಿಕಾರಿ ಧನುಷ್, ತಹಸೀಲ್ದಾರ್ ವಿಶ್ವನಾಥ್, ಪೌರಾಯುಕ್ತೆ ಪಂಪಶ್ರೀ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಾ ಇತರರಿದ್ದರು.