ಮಂಗಳೂರು: ಕರೊನಾ ಎರಡನೇ ಅಲೆಯ ಮುನ್ಸೂಚನೆ ಎಂಬಂತೆ ಮಾರ್ಚ್ ಆರಂಭದಿಂದ ದ.ಕ ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದ್ದು, ದಿನಕ್ಕೆ ಸರಾಸರಿ 50ರಷ್ಟು ಪ್ರಕರಣಗಳು ದಾಖಲಾಗುತ್ತಿದೆ. ಶೇ.1ಕ್ಕಿಂತಲೂ ಕಡಿಮೆಯಾಗಿದ್ದ ಕರೊನಾ ಪಾಸಿಟಿವಿಟಿ ಪ್ರಮಾಣ 1.81ಕ್ಕೆ ಏರಿಕೆಯಾಗಿದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳೂರು ಪತ್ರಿಕಾಭವನದಲ್ಲಿ ಆಯೋಜಿಸಲಾದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳು ವಿದ್ಯಾರ್ಥಿಗಳಲ್ಲಿ ದಾಖಲಾಗುತ್ತಿದೆ. ದೇಶದ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು ಮಂಗಳೂರಿಗೆ ಬರುತ್ತಿದ್ದು, ಕರೊನಾ ಕುರಿತು ಲಘುವಾದ ಭಾವನೆ ಹೊಂದಿರುವುದರಿಂದ ವೈರಸ್ ಹರಡುತ್ತಿದೆ. ಜತೆಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮಿತಿಮೀರಿದ್ದು, ಅಂತರ, ಮಾಸ್ಕ್, ಸ್ವಚ್ಛತೆ ಆದ್ಯತಯೇ ನೀಡುತ್ತಿಲ್ಲ. 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿ, ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆತ್ಮಭೂಷಣ್ ಕಾರ್ಯಕ್ರಮ ನಿರೂಪಿಸಿದರು.