ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟಲ್ ಪಿಂಚಣಿ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗೆ 14 ಲಕ್ಷ ನೋಂದಣಿ ಗುರಿ ಹೊಂದಿದ್ದು, ಪ್ರಸ್ತುತ 10 ಲಕ್ಷ ಸಾಧನೆ ಮಾಡಲಾಗಿದೆ. ಬ್ಯಾಂಕ್‌ಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಲೀಡ್ ಬ್ಯಾಂಕ್ ಅಧ್ಯಕ್ಷ ಡಾ.ಕುಮಾರ್ ಹೇಳಿದರು.
ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಗುರುವಾರ ಬ್ಯಾಂಕ್‌ಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 17 ಯೋಜನೆಗಳಿಗೆ ನೋಂದಣಿ ಮಾಡುವಲ್ಲಿ ದೇಶದಲ್ಲೇ ದಕ್ಷಿಣ ಕನ್ನಡ ಹಾಗೂ ಬೆಳಗಾವಿ 5ನೇ ಸ್ಥಾನದಲ್ಲಿದೆ. ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಬ್ಯಾಂಕ್‌ಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದರು.
ಗುರಿ ಸಾಧನೆಯ ಬಗ್ಗೆ ಸಭೆಗೆ ಸಮರ್ಪಕ ಮಾಹಿತಿ ನೀಡದ ಬ್ಯಾಂಕ್ ಅಧಿಕಾರಿಗಳ ಬಗ್ಗೆ ಅಸಮಾಧಾನಗೊಂಡ ಡಾ.ಕುಮಾರ್, ಮಾಹಿತಿ ಇಲ್ಲದೆ ಅಧಿಕಾರಿಗಳು ಸಭೆಗೆ ಬರುವ ಅಗತ್ಯವಿಲ್ಲ. ಅಂತಹ ಬ್ಯಾಂಕ್‌ಗಳಿಗೆ ನೋಟಿಸ್ ಜಾರಿ ಮಾಡಲು ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಅವರಿಗೆ ಸೂಚಿಸಿದರು.
ಪಿಎಂಜೆಜೆಬಿವೈ, ಪಿಎಂಎಸ್‌ಬಿವೈ, ಅಟಲ್ ಪಿಂಚಣಿ ಯೋಜನೆಗೆ ಆಶಾ, ಅಂಗನವಾಡಿ ಕಾರ್ಯಕರ್ತರು, ಬಿಲ್ ಕಲೆಕ್ಟರ್, ಪಂಪ್ ಚಾಲಕರು ಮೊದಲಾದವರನ್ನು ಕಡ್ಡಾಯವಾಗಿ ಸೇರ್ಪಡೆ ಮಾಡಲು ಜಾಗೃತಿ ಮೂಡಿಸಬೇಕು. ಈ ಬಗ್ಗೆ ಆದೇಶ ಹೊರಡಿಸುವುದಾಗಿ ಹೇಳಿದರು.