

ಮಂಗಳೂರು: ಭಾರತೀಯ ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ರ ಸಂಜೆ 6 ಗಂಟೆಯಿಂದ 26ರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ / ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ.
ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿಬರ್ಂಧಿಸಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವದೇ ಮಾಡುವಂತಹ ಚಿತ್ರಗಳು, ಚಿನ್ಹೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ -19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸುವಂತೆ ಚುನಾವಣಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.