ದಕ್ಕೆ ಬಳಿ ನದಿಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಶವ ಪತ್ತೆ

ಕೊಲೆ
ಕೊಲೆ
Published on
ಮಂಗಳೂರು: ಇಲ್ಲಿನ ದಕ್ಕೆ ಮೀನುಗಾರಿಕಾ ಬಂದರ್ ಸಮೀಪ ನದಿಯಲ್ಲಿ ಬುಧವಾರ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ನಾಸೀರ್ ಯಾನೆ ದಕ್ಕೆ ನಾಸಿರ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಹಲವಾರು ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ.
ಯಾವುದೋ ದ್ವೇಷದಿಂದ ಮೃತನ ಹಣೆ ಹಾಗೂ ದೇಹದ ಮೇಲೆ ಗಾಯಗಳ ಗುರುತುಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ದಕ್ಕೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಪಕ್ಕದ ನದಿಯಲ್ಲಿ ಶವ ಪತ್ತೆಯಾಗಿದ್ದು, ಮಾಹಿತಿ ತಿಳಿದ ಕೂಡಲೇ ಪಾಂಡೇಶ್ವರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿಯ ಮೊಬೈಲ್ ನಾಪತ್ತೆಯಾಗಿದ್ದು, ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ನಡೆದ ಎರಡನೇ ಕೊಲೆ ಪ್ರಕರಣ ಇದಾಗಿದ್ದು ಕಳೆದ ಮಾ.27ರಂದು ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ರೌಡಿಶೀಟರ್ ಆರಿಫ್ ಹುಸೇನ್ ಎಂಬಾತನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಕಡಿದು ಹತ್ಯೆ ಮಾಡಿದ್ದರು. ಈ ಪ್ರಕರಣ ತನಿಖೆಯಲ್ಲಿದ್ದು, ಕೆಲವು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net