ವಿದ್ಯಾರ್ಥಿಗಳ ಬಳಿ 290 ಗ್ರಾಂ ಗಾಂಜಾ ಪತ್ತೆ ಮೂವರು ವಿರುದ್ಧ ಪ್ರಕರಣ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on

ಮಂಗಳೂರು: ನಗರದ ಕಾಲೇಜೊಂದರಲ್ಲಿ ಮಂಗಳವಾರ ವಿದ್ಯಾರ್ಥಿಗಳಿಂದ 290 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಪೋಲಿಸ್ ಇಲಾಖೆ ಹಾಗೂ ಕಾಲೇಜು ಆಡಳಿತ ಮಂಡಳಿ ಜಂಟಿಯಾಗಿ ನಡೆಸಿದ ಜಾಗೃತಿ ಅಭಿಯಾನದ ನಂತರ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾವನ್ನು ಬಿಗಿಗೊಳಿಸಲಾಗಿತ್ತು. ಈ ವೇಳೆ, ಸಣ್ಣ ಸಣ್ಣ ಪ್ಯಾಕೆಟ್‌ಗಳಲ್ಲಿ ಇಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಜೊತೆಗೆ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ರೆಡ್‌ಹ್ಯಾಂಡ್ ಆಗಿ ಹಿಡಿದು ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ.
ಬಂಧಿತ ಮೂವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಮೂವರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಕಾಲೇಜಿಗೆ ಗಾಂಜಾ ತಂದಿದ್ದ ವಿದ್ಯಾರ್ಥಿಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ಆತನ ಶೈಕ್ಷಣಿಕ ಭವಿಷ್ಯ ಹಾಗೂ ಆತನ ಬಳಿ ಇದ್ದ ಗಾಂಜಾ ಪ್ರಮಾಣವನ್ನು ಪರಿಗಣಿಸಿ, ನ್ಯಾಯಾಲಯವು ಶ್ಯೂರಿಟಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮುಖ್ಯ ಪೆಡ್ಲರ್ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಆಶಾದಾಯಕ ಬೆಳವಣಿಗೆ : ಅನೇಕ ಕಾಲೇಜುಗಳು ಈಗ ಸ್ವಯಂಪ್ರೇರಿತವಾಗಿ ತಪಾಸಣೆಗಳನ್ನು ನಡೆಸುತ್ತಿದ್ದು, ಅವುಗಳ ಮಾದಕವಸ್ತು ವಿರೋಧಿ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇದೇ ರೀತಿಯ ಬದ್ಧತೆಯನ್ನು ಎಲ್ಲಾ ಕಾಲೇಜುಗಳು ಪ್ರದರ್ಶಿಸಿದರೆ, ಅತ್ಯಂತ ಕಡಿಮೆ ಅವಧಿಯಲ್ಲೇ ಸಂಪೂರ್ಣ ಮಾದಕವಸ್ತು ಮುಕ್ತ, ಸುರಕ್ಷಿತ ಹಾಗೂ ಆರೋಗ್ಯಕರ ಕ್ಯಾಂಪಸ್‌ಗಳನ್ನು ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net