

ವಿಜಯವಾಣಿ ಸುದ್ದಿಜಾಲ ಕಾಸರಗೋಡು
ರಾಜ್ಯ ಸರ್ಕಾರ ಅಖಂಡ ಕರ್ನಾಟಕದ ಭಾಗವಾಗಿದ್ದ ಎಲ್ಲ ಪ್ರದೇಶಗಳೊಂದಿಗೆ ಭಾವನಾತ್ಮಕ ಸಂಪರ್ಕ ಹೊಂದುವಲ್ಲಿ ವಿಶೇಷ ಕ್ರಿಯಾ ಯೋಜನೆ ರಚಿಸುವುದು ಅನಿವಾರ್ಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದರು.
ಕಾಸರಗೋಡಿನ ಕನ್ನಡಿಗರ ಬೇಡಿಕೆಗಳನ್ನು ಪರಿಗಣಿಸುವ ನಿಟ್ಟಿನಲ್ಲಿ ಗಡಿನಾಡು ಕಾಸರಗೋಡಿನ ಕನ್ನಡಿಗರ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಶಿವರಾಜ್ ತಂಗಡಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಮತ್ತು ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳನ್ನು ಭೇಟಿಯಾಗಿ ಬಳಿಕ ಮಾತನಾಡಿದರು.
ಕರ್ನಾಟಕ ರಾಜ್ಯ ಇದೇ ಮೊದಲ ಬಾರಿಗೆ ಗಡಿ ಭಾಗಗಳ ಸಮಸ್ಯೆಗಳನ್ನು ಅವಲೋಕಿಸಿ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿದ್ದು, ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿರಿಸಿದೆ. ಗಡಿ ಉಸ್ತುವಾರಿ ಸಚಿವರು ಕಾಸರಗೋಡು, ಸಾಂಗ್ಲಿ, ಸೊಲ್ಲಾಪುರದಂತಹ ಅಚ್ಚ ಕನ್ನಡ ಪ್ರದೇಶಗಳಲ್ಲಿ ವಾಸಿಸುವ ಕನ್ನಡಿಗರ ಸಮಗ್ರ ಹಿತಕ್ಕೆ ಮುಂದಾದಲ್ಲಿ ಅಖಂಡ ಕರ್ನಾಟಕ ತನ್ನ ಸಾಂಸ್ಕೃತಿಕ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ನಿಯೋಗದಲ್ಲಿ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸೋಮಣ್ಣ ಬೇವಿನಮರದ, ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ, ಕೇರಳ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗೌರವ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕಾಸರಗೋಡಿನ ಗಮಕ ಕಲಾ ಪರಿಷತ್ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ನಿವೃತ್ತ ಪ್ರಾಧ್ಯಾಪಕಿ ಡಾ.ಪ್ರಮೀಳಾ ಮಾಧವ್, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಮೊದಲಾದವರು ಉಪಸ್ಥಿತರಿದ್ದರು.