ಮೋಸ ವಂಚನೆಗಳ ವಿರುದ್ಧ ಧ್ವನಿಯೆತ್ತುವುದು ಗ್ರಾಹಕ ಕರ್ತವ್ಯ

 ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮಂಗಳೂರು ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಗ್ರಾಹಕ ದಿನಾಚರಣೆ ಕಾರ್ಯಕ್ರಮ ನೆರವೇರಿತು.
ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮಂಗಳೂರು ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಗ್ರಾಹಕ ದಿನಾಚರಣೆ ಕಾರ್ಯಕ್ರಮ ನೆರವೇರಿತು.
Published on
ಮಂಗಳೂರು: ಮೋಸ ವಂಚನೆಗಳ ವಿರುದ್ಧ ಧ್ವನಿಯೆತ್ತುವುದು ಗ್ರಾಹಕ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.
ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಗ್ರಾಹಕರ ವ್ಯಾಜ್ಯ ವಿಲೇವಾರಿ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಗ್ರಾಹಕ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಗ್ರಾಹಕರು ಮೋಸ ವಂಚನೆಗಳ ವಿರುದ್ಧ ಧ್ವನಿಯೆತ್ತಿ ಸತ್ಯ ಪ್ರಾಮಾಣಿಕತೆಗೆ ಪ್ರಾಧಾನ್ಯತೆಯನ್ನು ನೀಡಬೇಕಾಗಿದೆ. ವಸ್ತುಗಳ ಗುಣಮಟ್ಟದ ಖಾತ್ರಿ ಪಡಿಸಿಕೊಂಡು ಅದರ ಸಂಪೂರ್ಣ ತಿಳುವಳಿಕೆಯನ್ನು ಹೊಂದಿ ದಿನಾಂಕಗಳನ್ನು ಸೂಕ್ತವಾಗಿ ಗಮನಿಸಿಕೊಳ್ಳಬೇಕಾದ ಅಗತ್ಯವಿದೆ. ವಿಶ್ವ ಗ್ರಾಹಕ ಹಕ್ಕುಗಳ ದಿನವು ಗ್ರಾಹಕರ ಹಕ್ಕುಗಳಿಗಾಗಿ ಪ್ರತಿಪಾದಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಆದ್ದರಿಂದ ಗ್ರಾಹಕರನ್ನು ಸಶಕ್ತಗೊಳಿಸಿ, ಜಗತ್ತನ್ನು ಸಶಕ್ತಗೊಳಿಸೋಣ ಎಂದರು.
ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ನಾಗರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಹಕರ ಸುರಕ್ಷತೆ ಕಾಯ್ದೆಯ ಪ್ರಕಾರ ಗ್ರಾಹಕರಾಗಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸಬೇಕು ಎಂದು ಈ ದಿನದಂದು ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಭಾರತದಲ್ಲೂ ಪ್ರತಿ ವರ್ಷ ಗ್ರಾಹಕರ ಹಕ್ಕುಗಳ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದಂದು ವಿಚಾರ ಸಂಕಿರಣಗಳು, ಚರ್ಚಾಗೋಷ್ಠಿಗಳು, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ ಎಂದರು.
ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹ ನಿರ್ದೇಶಕಿ, ಪ್ರಾಂಶುಪಾಲೆ ಪುಷ್ಪಲತಾ ಎಚ್ ಕೆ, ಒಕ್ಕೂಟದ ಉಪಾಧ್ಯಕ್ಷ ಎಡ್ವಿನ್ ಡಿ ಮೆಲ್ಲೊ ಕಿನ್ನಿಗೋಳಿ, ನ್ಯಾಯವಾದಿ ರಾಘವೇಂದ್ರ ರಾವ್, ವಿಶ್ವವಿದ್ಯಾಲಯ ಕಾಲೇಜಿನ ಯತೀಶ್, ಹಾಜರಿದ್ದರು.
ಒಕ್ಕೂಟದ ಅಧ್ಯಕ್ಷೆ ಸುನಂದ ಕುಂಬ್ಳೆ ಸ್ವಾಗತಿಸಿದರು. ಗೌರವಾಧ್ಯಕ್ಷ ಎಂಜೆ ಸಾಲಿಯಾನ್ ಪ್ರಾಸ್ತಾವಿಸಿದರು. ಇಂದಿರಾ ಕಾರ್ಯಕ್ರಮ ನಿರೂಪಿಸಿದರು. ಸುನಂದ ಡಿಆರ್ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net