ಮನೆಯೊಂದರಲ್ಲಿ ಬಿದ್ದು ಗಾಯಗೊಂಡಾತ ಸಾವು

ಪೆರಾಬೆ ಗ್ರಾಮದ ಮೂಲೆತ್ತಮಜಲಿನಲ್ಲಿ ಘಟನೆ
death
death
Published on: 

ಕಡಬ: ಮನೆಯೊಂದರಲ್ಲಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಪೆರಾಬೆ ಗ್ರಾಮದ ಮೂಲೆತ್ತಮಜಲಿನಲ್ಲಿ ನಡೆದಿದೆ.

ಮೃತರನ್ನು ಪೆರಾಬೆ ಗ್ರಾಮದ ಮೂಲೆತ್ತಮಜಲು ನಿವಾಸಿ ನಾರಾಯಣ ಎಂಬುವರ ಪುತ್ರ ಚಂದ್ರಹಾಸ(41) ಎಂದು ಗುರುತಿಸಲಾಗಿದೆ. ನ.12ರಂದು ಸಂಜೆ ಚಂದ್ರಹಾಸ ಅವರು ಮೂಲೆತ್ತಮಜಲಿನ ಮೋನಪ್ಪ ಎಂಬುವರ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಆಂಬುಲೆನ್ಸ್ ಮೂಲಕ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಚಂದ್ರಹಾಸ ಅವರು ಮದ್ಯಪಾನದ ಚಟ ಹೊಂದಿದ್ದು, ಫಿಟ್ಸ್ ಕಾಯಿಲೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ. ಸುಮಾರು 15 ವರ್ಷಗಳ ಹಿಂದೆ ವಿವಾಹವಾಗಿದ್ದು ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ಮೃತರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಅವರ ಸಹೋದರ ರವಿ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾವಿನ ನಿಖರ ಕಾರಣ ತಿಳಿಯಲು ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಿದ್ದಾರೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.