ಮನೆ ಕಳವು ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸರು

ನವದೆಹಲಿ ಮೂಲದ ಇಬ್ಬರು ಆರೋಪಿಗಳ ಸೆರೆ, 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಸೊತ್ತು ವಶ
ಅರ್ಮಾನ್ ಖಾನ್
ಅರ್ಮಾನ್ ಖಾನ್
Published on: 

ಮಂಗಳೂರು: ನಗರದಲ್ಲಿ ಮನೆ ಕಳ್ಳತನ ನಡೆಸಿ ರೈಲಿನಲ್ಲಿ ನವದೆಹಲಿ ಕಡೆಗೆ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ವಡೋದರಾದಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈಶಾನ್ಯ ದೆಹಲಿಯ ಗೋಕುಲ್ ಪುರಿ ನಿವಾಸಿ ಅರ್ಮಾನ್ ಖಾನ್ ಅಮನ್ ಸೋನಿ (34), ನವದೆಹಲಿಯ ಸುಲ್ತಾನ್ ಪುರಿಯ ಸಂಜೀವ್ ಕುಮಾರ್ ಜಾನಿ (34) ಬಂಧಿತರು.

ಪ್ರಕರಣದ ವಿವರ

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿಯ ಮನೆಯೊಂದಕ್ಕೆ ಬೀಗ ಹಾಕಿ ಮನೆಯವರು ಮಧ್ಯಾಹ್ನ ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿ ಮುರಿದಿರುವುದು ಕಂಡು ಬಂದಿದೆ. ಒಳಗೆ ಪರಿಶೀಲಿಸಿದಾಗ ಸುಮಾರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಕಳವಾಗಿರುವುದು ಗೊತ್ತಾಗಿದೆ.

ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು. ಇದೇ ವೇಳೆ ಸೆ.27ರಂದು ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲಿ ಲಾಕರ್ ಒಡೆದು ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣವೂ ಪೊಲೀಸರ ಗಮನಕ್ಕೆ ಬಂದಿತ್ತು. ಬೆಲೆಬಾಳುವ ಸೊತ್ತು ದೊರೆಯದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳ್ಳರು ಕಳವು ಮಾಡಿದ್ದರು.

ರೈಲಿನಲ್ಲಿ ನವದೆಹಲಿ ಕಡೆಗೆ ಪರಾರಿ

ಎರಡೂ ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಿದ್ದರು. ಕೃತ್ಯ ಎಸಗಿದ ಬಳಿಕ ಆರೋಪಿಗಳು ರೈಲಿನಲ್ಲಿ ನವದೆಹಲಿ ಕಡೆಗೆ ತೆರಳುತ್ತಿರುವುದು ಪತ್ತೆಯಾಗಿತ್ತು. ತಕ್ಷಣ ಗುಜರಾತ್ ಪೊಲೀಸರ ಸಹಕಾರ ಪಡೆಯಲಾಯಿತು.

ಮಂಗಳೂರು ಪೊಲೀಸರ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಾದ 24 ಗಂಟೆಗಳೊಳಗೆ, ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿಗಳಿಂದ ಕಳವು ಮಾಡಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು ಮೌಲ್ಯ ಸುಮಾರು 18 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

40ಕ್ಕೂ ಅಧಿಕ ಪ್ರಕರಣ

ಬಂಧಿತರ ಪೈಕಿ ಅರ್ಮಾನ್ ಖಾನ್ ವಿರುದ್ಧ ನವದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇರುವುದಾಗಿ ತಿಳಿದುಬಂದಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೀವ್ ಕುಮಾರ್
ಸಂಜೀವ್ ಕುಮಾರ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net