ಭಜನೆಯಿಂದ ಭಗವಂತನ ಸಾಕ್ಷಾತ್ಕಾರ

ಧರ್ಮಸ್ಥಳ ಭಜನಾ ಕಮ್ಮಟ ಸಮಾರೋಪ
 ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಡಾ.ಡಿ.ವೀರೇಂದ್ರ ಹೆಗ್ಗಡೆ, ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ ಮೊದಲಾದವರು ಇದ್ದರು.
ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಡಾ.ಡಿ.ವೀರೇಂದ್ರ ಹೆಗ್ಗಡೆ, ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ ಮೊದಲಾದವರು ಇದ್ದರು.
Published on: 

ಬೆಳ್ತಂಗಡಿ (ದ.ಕ.): ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ. ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.

ಧರ್ಮಸ್ಥಳದಲ್ಲಿ 28ನೇ ವಷರ್ದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಆಶೀರ್ವಚನ ನೀಡಿದರು.

ಭಗವಂತನ ಸಾಕ್ಷಾತ್ಕಾರಕ್ಕೆ ಹಲವಾರು ಮಾರ್ಗಗಳಿದ್ದರೂ ಶ್ರದ್ಧಾಭಕ್ತಿಯಿಂದ ರಾಗ, ತಾಳ, ಲಯಬದ್ಧವಾಗಿ ಶಿಸ್ತಿನಿಂದ ಭಜನೆ ಹಾಡಿದರೆ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು. ನಾಡಿನ ಅನೇಕ ಸಾಧು-ಸಂತರು, ಮೀರಾಬಾಯಿಯಂತಹ ಸಾಧಕರು ಭಕ್ತಿಯಿಂದ ತಮ್ಮನ್ನು ತಾವು ಸಮರ್ಪಿಸಿಕೊಂಡು ದೇವರ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ. ಇಸ್ಕಾನ್‌ನವರು ವಿದೇಶಗಳಲ್ಲಿ ಕೂಡ ಭಜನೆ ಮೂಲಕ ದೇವರ ಅನುಗ್ರಹಕ್ಕೆ ಪಾತ್ರರಾಗುವ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಹೆಗ್ಗಡೆಯವರು ಜನಮಂಗಳ ಕಾರ್ಯ ಮೂಲಕ ರಾಜರ್ಷಿಯಾಗಿದ್ದಾರೆ ಎಂದರು.

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದರು. ಕಮ್ಮಟದಲ್ಲಿ ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ಸಂಪನ್ಮೂಲ ವ್ಯಕ್ತಿಗಳು ಮತ್ತು ಹಿರಿಯ ವಿದ್ವಾಂಸರನ್ನು ಹೆಗ್ಗಡೆ ಅಭಿನಂದಿಸಿದರು.

ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ವರದಿ ವಾಚಿಸಿ, ಕಮ್ಮಟದಲ್ಲಿ 107 ಪುರುಷರು ಮತ್ತು 105 ಮಹಿಳೆಯರು ಸೇರಿ ಒಟ್ಟು 212 ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ ಎಂದರು. ಬ್ರಹ್ಮಾವರದ ತಿಮ್ಮಪ್ಪ ಕರ್ಕೇರ ಮತ್ತು ಸುಳ್ಯದ ಶ್ರೀಲತಾ ಕಮ್ಮಟದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಶಿಬಿರಾರ್ಥಿಗಳಿಂದ ಸಾಮೂಹಿಕ ನೃತ್ಯ ಭಜನೆ ಮತ್ತು ಕುಣಿತ ಭಜನೆ ನಡೆಯಿತು.

ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ಮಾಜಿ ಎಂಎಲ್‌ಸಿ ಕೆ.ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ರತ್ನವರ್ಮ ಜೈನ್ ವಂದಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ನಿರೂಪಿಸಿದರು.

ಶಿಬಿರಾರ್ಥಿಗಳು ಕಮ್ಮಟದಲ್ಲಿ ಪಡೆದ ಅನುಭವವನ್ನು ಸದುಪಯೋಗಪಡಿಸಿ ಆಯಾ ಊರಿನ ನಾಯಕರಾಗಿ ಪ್ರಗತಿಯ ರೂವಾರಿಗಳಾಗಬೇಕು. ನಿತ್ಯವೂ ರಾಗ, ತಾಳ, ಲಯಬದ್ಧವಾಗಿ ಭಜನೆ ಹಾಡಿ ಸಾರ್ಥಕ ಜೀವನ ನಡೆಸಬೇಕು.
ಡಿ.ವೀರೇಂದ್ರ ಹೆಗ್ಗಡೆ ಧರ್ಮಾಧಿಕಾರಿಗಳು
ಸನಾತನ ಸಂಸ್ಕೃತಿಯ ಪುನರುತ್ಥಾನಕ್ಕೆ ಕೃಷಿ ಸಂಸ್ಕೃತಿ ಮತ್ತು ಋಷಿ ಸಂಸ್ಕೃತಿಯನ್ನು ಮರೆಯಬಾರದು. ಭಜನೆಯಿಂದ ನಾಲಗೆ ಪವಿತ್ರವಾಗಿ ಸಾರ್ಥಕ ಬದುಕಿಗೆ ಸ್ಫೂರ್ತಿ ದೊರಕುತ್ತದೆ. ಭಾವುಕರಾಗಿ ಭಜನೆ ಮಾಡಿದರೆ ಜೀವನಮಟ್ಟ ಸುಧಾರಣೆಯೊಂದಿಗೆ ನೈತಿಕ, ಧಾರ್ಮಿಕ ಮಟ್ಟವೂ ಉನ್ನತಿಗೇರುತ್ತದೆ.
ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಮಠ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net