ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ಸಿದ್ಧ

ಮುಂಡಾಜೆ ಮೊರಾರ್ಜಿ ವಸತಿಶಾಲೆಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ.
ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ.
Published on: 

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕಿನ ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಸುಮಾರು 3 ಕೋಟಿ ರೂ. ವೆಚ್ಚದ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಆಧುನಿಕ ಸೌಲಭ್ಯಗಳನ್ನೊಳಗೊಂಡಿರುವ ಕ್ರೀಡಾಂಗಣ ಶೀಘ್ರದಲ್ಲೇ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳಿಗೆ ಮುಕ್ತವಾಗುವ ನಿರೀಕ್ಷೆಯಿದೆ.

2025 ಏಪ್ರಿಲ್ 1ರಂದು ಕ್ರೀಡಾಂಗಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿತ್ತು. ಬಳಿಕ ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗಿದ್ದು, ಇದೀಗ ಮೈದಾನದ ಬಹುತೇಕ ಕಾಮಗಾರಿ ಪೂರ್ಣಗೊಂಡಿವೆ. ಸುಮಾರು 125 ಮೀ. ಉದ್ದ ಹಾಗೂ 65 ಮೀ. ಅಗಲದ ವಿಶಾಲ ಮೈದಾನವನ್ನು ಫುಟ್ಬಾಲ್ ಪಂದ್ಯಾಕೂಟಗಳಿಗೆ ಅನುಕೂಲವಾಗುವ ರೀತಿಯಲ್ಲಿ ರೂಪಿಸಲಾಗಿದೆ.

ಸಿಂಥೆಟಿಕ್ ಟರ್ಫ್, ಒಳಚರಂಡಿ ವ್ಯವಸ್ಥೆ

ಕ್ರೀಡಾಂಗಣವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲಾಗಿದ್ದು, ಸಿಂಥೆಟಿಕ್ ಟರ್ಫ್ ಮ್ಯಾಟ್, ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಲಾಗಿದೆ. ಮಳೆಗಾಲದಲ್ಲಿ ಮೈದಾನದಲ್ಲಿ ನೀರು ನಿಲ್ಲದಂತೆ ಸೂಕ್ತ ಒಳಚರಂಡಿ ವ್ಯವಸ್ಥೆ ರೂಪಿಸಲಾಗಿದೆ. ತಾಲೂಕು ಹಾಗೂ ಜಿಲ್ಲಾಮಟ್ಟದ ಪಂದ್ಯಾಟಗಳ ಜತೆಗೆ ರಾಜ್ಯಮಟ್ಟದ ಫುಟ್ಬಾಲ್ ಸ್ಪರ್ಧೆ, ಕ್ರೀಡಾ ಶಿಬಿರ ಹಾಗೂ ತರಬೇತಿ ಕಾರ್ಯಕ್ರಮ ನಡೆಸಲು ಅನುಕೂಲವಾಗುವ ರೀತಿಯಲ್ಲಿ ಸುಸಜ್ಜಿತಗೊಳಿಸಲಾಗಿದೆ.

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ

ಮುಂಡಾಜೆ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಫುಟ್ಬಾಲ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಆಸಕ್ತಿ ಹೊಂದಿರುವ ಸಾಕಷ್ಟು ವಿದ್ಯಾರ್ಥಿಗಳಿದ್ದಾರೆ. ಆದರೆ ಗುಣಮಟ್ಟದ ಮೈದಾನ ಮತ್ತು ತರಬೇತಿ ಸೌಲಭ್ಯಗಳ ಕೊರತೆಯಿಂದಾಗಿ ಪ್ರತಿಭೆಗಳಿಗೆ ಸೂಕ್ತ ಅವಕಾಶ ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮೊರಾರ್ಜಿ ಶಾಲೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಕ್ರೀಡಾಂಗಣ ಮುಂಡಾಜೆ ಮಾತ್ರವಲ್ಲದೆ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಮಹತ್ವದ ವೇದಿಕೆಯಾಗುವ ನಿರೀಕ್ಷೆ ಮೂಡಿಸಿದೆ. ಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಪಂದ್ಯಾಟಗಳ ಜತೆಗೆ ಅನುಮತಿ ಪಡೆದು ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸಲೂ ಕ್ರೀಡಾಂಗಣ ಬಳಸಿಕೊಳ್ಳಬಹುದಾಗಿದೆ.

1992-93ರಲ್ಲಿ ಆರಂಭವಾದ ವಿದ್ಯಾಲಯ

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ 1992-93ರಲ್ಲಿ ಆರಂಭಗೊಂಡಿದ್ದು, ಹಲವು ವಷರ್ಗಳಿಂದ ಗ್ರಾಮೀಣ ಹಾಗೂ ರಾಜ್ಯದ ನಾನಾ ಭಾಗಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ವಸತಿ ಸೌಲಭ್ಯ ಒದಗಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ 6ರಿಂದ 10ನೇ ತರಗತಿವರೆಗೆ ರಾಜ್ಯದ ವಿವಿಧ ಭಾಗಗಳ 226 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರಾಂಶುಪಾಲ ಸೇರಿದಂತೆ 10 ಮಂದಿ ಶಿಕ್ಷಕರು ಹಾಗೂ 13 ಮಂದಿ ಬೋಧಕೇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿ ಪ್ರತಿ ವರ್ಷ ಉತ್ತಮ ಫಲಿತಾಂಶ ದಾಖಲಿಸುತ್ತಿದೆ.

ವಸತಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಕ್ರೀಡೆಯಲ್ಲಿಯೂ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸುಸಜ್ಜಿತ ಕ್ರೀಡಾಂಗಣ ವಿದ್ಯಾರ್ಥಿಗಳ ದೈಹಿಕ ಕ್ಷಮತೆ, ಶಿಸ್ತು, ತಂಡ ಮನೋಭಾವ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಸಹಕಾರಿಯಾಗಲಿದೆ.
ಹರೀಶ್ ಪೂಂಜ, ಶಾಸಕ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net