ಗ್ಯಾಂಗ್‌ರೇಪ್ ಪ್ರಕರಣ ಎಸ್‌ಐಟಿ ತನಿಖೆಗೊಳಪಡಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

Dalit Sangharsh Committee workers protest mandya
Published on

ಮಂಡ್ಯ: ಮದ್ದೂರಿನಲ್ಲಿ ನಡೆದ ಅಪ್ರಾಪ್ತೆ ಮೇಲಿನ ಗ್ಯಾಂಗ್‌ರೇಪ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವುದರ ಜತೆಗೆ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ನ.4ರಂದು 17 ವರ್ಷ ವಯಸ್ಸಿನ ದಲಿತ ವಿದ್ಯಾರ್ಥಿನಿ ಮೇಲೆ ಕಾಮಾಂಧ ಯುವಕರು ಅತ್ಯಾಚಾರ ಮಾಡಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಬೇಕು. ಆರೋಪಿಗಳ ಜತೆಗೆ ಎಫ್‌ಐಆರ್‌ನಲ್ಲಿ ಕೈಬಿಟ್ಟಿರುವ ಭರತ್ ಎಂಬಾತನನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕು. ಈ ಪ್ರಕರಣದ ಸಂತ್ರಸ್ತ ದಲಿತ ವಿದ್ಯಾರ್ಥಿನಿ ಕುಟುಂಬಕ್ಕೆ ಸೂಕ್ತ ಪುನರ್ವಸತಿ ಕಲ್ಪಿಸಿ, ನ್ಯಾಯ ಮತ್ತು ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವೆಂಕಟಗಿರಿಯಯ್ಯ. ಅನಿಲ್‌ಕುಮಾರ್, ಕೆ.ಎಂ.ಶ್ರೀನಿವಾಸ್, ಬಿ.ಆನಂದ, ನಾಗರಾಜು ರಾಮಕೃಷ್ಣ, ಸೋಮಶೇಖರ್, ಹರಿಕುಮಾರ್, ಬಿ.ಎಂ.ಸೋಮಶೇಖರ್, ಬಲರಾಮಣ್ಣ, ಭಾಗ್ಯಮ್ಮ, ಗೀತಾ, ಸುಕನ್ಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net