

ಮಂಡ್ಯ: ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದಂತೆ ನಿಷೇಧಿಸಲ್ಪಟ್ಟ ಪದಗಳನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಭೂ ದಾಖಲೆಗಳಲ್ಲಿ ಬಳಕೆ ಮಾಡಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.
ಎಸ್ಸಿ, ಎಸ್ಟಿ ಸಮುದಾಯಕ್ಕೆ ಅಪಮಾನ ಉಂಟುಮಾಡುವ ಪದಗಳನ್ನು ಸರ್ಕಾರ 2010ರಲ್ಲಿ ನಿಷೇಧಿಸಿದೆ. ಆದಾಗ್ಯೂ ಪದಗಳನ್ನು ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬಳಕೆ ಮಾಡುವ ಮೂಲಕ ಸರ್ಕಾರದ ಆದೇಶಕ್ಕೆ ಅಗೌರವ ತೋರುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿನಃ ಕಾರಣ ವಿಷಯದ ಬಗ್ಗೆ ಮಾತನಾಡುವುದನ್ನು ಬಿಟ್ಟು ತಮ್ಮ ಇಲಾಖೆಗಳಲ್ಲಿ ಆಗುತ್ತಿರುವ ಲೋಪದೋಶಗಳನ್ನು ಸರಿಪಡಿಸಬೇಕು. ನಿಷೇಧಿಸಲ್ಪಟ್ಟ ಪದವನ್ನು ಯಾವುದೇ ಇಲಾಖೆಯಲ್ಲಿ ಬಳಕೆಯಾಗದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಮೈಸೂರು ವಿಭಾಗೀಯ ಸಂಚಾಲಕ ಅನಿಲ್‌ಕುಮಾರ್, ಜಿಲ್ಲಾಧ್ಯಕ್ಷ ಬಿ.ಆನಂದ್, ಜಿಲ್ಲಾಧ್ಯಕ್ಷೆ ಸುಶ್ಮಿತಾ, ಸುರೇಶ್, ಮುತ್ತುರಾಜ್, ತಮ್ಮಣ್ಣ, ಕುಮಾರ್, ಮೀನಾಕ್ಷಿ ಇತರರಿದ್ದರು.