

ಅರಕಲಗೂಡು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಸಂಸ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲೂಕು ಕಚೇರಿ ಮುಂದೆ ಜಮಾಯಿಸಿ, ಭೂಮಿ, ವಸತಿ ಮತ್ತು ಇತರೆ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಘೋಷಣೆ ಕೂಗಿದರು.
ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ತಳಸಮುದಾಯಗಳು ಭೂಮಿ ಪಡೆಯಲು ಬಗರ್ ಹುಕುಂ ಯೋಜನೆಯಡಿ ಸಲ್ಲಿಸಿರುವ ಅರ್ಜಿಗಳನ್ನು ವಿಲೆಮಾಡಬೇಕು. ವಸತಿ ಯೋಜನೆಯಡಿ ಮನೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪಟ್ಟಣದಲ್ಲಿ ನನೆಗುದಿಗೆ ಬಿದ್ದಿರುವ ಡಾ.ಅಂಬೇಡ್ಕರ್ ಭವನದ ಕಾಮಗಾರಿಯನ್ನು ಕೂಡಲೆ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಧರಣಿನಿರತರು ಎಚ್ಚರಿಸಿದರು.
ಬಳಿಕ ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖಂಡರಾದ ಕೇಶವಯ್ಯ, ಕುಮಾರ್, ವೀರಭದ್ರ, ಮಂಜು, ರವಿ, ದ್ಯಾವಯ್ಯ, ರಾಮಚಂದ್ರ ಇತರರು ಇದ್ದರು.