ದಸರಾ ಆಚರಣೆ ಮೇಲೆ ಪರಿಣಾಮ ಬೀರಲ್ಲ : ಸಂಸದ ಯದುವೀರ್

yaduveer
Published on

ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಉಂಟಾಗಿರುವ ಸಂಘರ್ಷವು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮೇಲೆ ಪರಿಣಾಮ ಬೀರಲ್ಲ ಎಂದು ರಾಜವಂಶಸ್ಥ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.


ನಗರದಲ್ಲಿ ಗುರುವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಾಧಿಕಾರ ರಚನೆಯಿಂದ ರಾಜಮನೆತನ ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷ ಉಂಟಾಗಿರುವುದು ನಿಜ. ಆದರೆ, ಇದು ದಸರಾ ಆಚರಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಸಲವೂ ಸಂಪ್ರದಾಯದಂತೆ ನಾಡಹಬ್ಬ ನಡೆಯಲಿದೆ ಎಂದರು.


ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕೈಗೊಂಡಿರುವ ಕೆಲವು ನಿರ್ಣಯಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಪ್ರಾಧಿಕಾರದ ರಚನೆ ವಿಚಾರವಾಗಿ ಈಗಾಗಲೇ ಕೋರ್ಟ್‌ನಿಂದ ತಡೆಯಾಜ್ಞೆ ಇದ್ದರೂ ಮುಖ್ಯಮಂತ್ರಿ ಸಮ್ಮುಖದಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿರುವುದು ಕಾನೂನುಬಾಹಿರ.

ಆ ನಿರ್ಣಯಗಳು ಊರ್ಜಿತವಾಗುವುದಿಲ್ಲ. ನಾವು ಕಾನೂನಾತ್ಮಕ ಹೋರಾಟ ಮುಂದುವರಿಸುತ್ತೇವೆ. ನಮ್ಮ ಮುಂದಿನ ನಡೆ ಏನು ಎಂದು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net