

ಮೈಸೂರು: ತಂತ್ರಜ್ಞಾನ ಸಾಕಷ್ಟು ಬೆಳವಣಿಗೆ ಹೊಂದಿದ್ದು, ಯಂತ್ರದ ಮೂಲಕ ಕಲಾಕೃತಿಗಳನ್ನು ತಯಾರಿಸಲಾಗುತ್ತಿದೆ. ಏನೇ ಆದರೂ ಕಲಾವಿದ ರಿಂದ ತಯಾರಾಗುವ ಕಲಾಕೃತಿಗಳಿಗೆ ಹೆಚ್ಚಿನ ಮಹತ್ವ ಇದ್ದು, ಅಂತಹ ಕಲಾಕೃತಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.
ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ ಉಪ ಸಮಿತಿ, ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ನಗರದ ಕಲಾಮಂದಿರ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಚಿತ್ರಕಲಾ ಶಿಬಿರದಲ್ಲಿ ಮಾತನಾಡಿದ ಅವರು, ಕಲಾವಿದರಿಗೆ ಉತ್ತೇಜನ ನೀಡಲು ಇಂತಹ ಶಿಬಿರಗಳ ಅವಶ್ಯಕತೆ ಇದೆ. ಕಲೆ ಮತ್ತು ಸಂಸ್ಕೃತಿಯಲ್ಲಿ ಮೈಸೂರು ಅಗ್ರಗಣ್ಯವಾಗಿದ್ದು, ಕಲೆ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದರು.
ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ ಕಮಲಾಕ್ಷಿ ಮಾತನಾಡಿ, ಫ್ರಾನ್ಸ್‌ನಲ್ಲಿ ದಸರಾ ಮಾದರಿಯಲ್ಲಿ ಪ್ರತಿವರ್ಷ ನಡೆಯುವ ಉತ್ಸವಕ್ಕೆ ಎರಡು ವರ್ಷಗಳ ಮುಂಚೆ ತಯಾರಿ ಮಾಡಿಕೊಳ್ಳುತ್ತಾರೆ. ಅಲ್ಲಿ ಕಲೆ ಮತ್ತು ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ವಿಶ್ವದ ವಿವಿಧ ಭಾಗಗಳಿಂದ ಕಲಾವಿದರನ್ನು ಉತ್ಸವಕ್ಕೆ ಆಹ್ವಾನಿಸುತ್ತಾರೆ. ಇಲ್ಲೂ ಅದೇ ಮಾದರಿಯಲ್ಲಿ ದಸರಾ ಉತ್ಸವ ಆಯೋಜಿಸಬೇಕು ಎಂದು ಸಲಹೆ ನೀಡಿದರು.
ಮೇಯರ್ ಶಿವಕುಮಾರ್ ಮಾತನಾಡಿ, ಮಹಾರಾಜರು ಕಲೆ, ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡುತ್ತಿದ್ದರು. ಆ ಪರಂಪರೆ ಇಂದಿಗೂ ಮುಂದುವರೆದುಕೊಂಡು ಬಂದಿದೆ. ನಗರ ಪಾಲಿಕೆ ಬಜೆಟ್‌ನಲ್ಲಿ ಕಲಾವಿದರಿಗೆ ಪ್ರೋತ್ಸಾಹ ನೀಡಲು ಪ್ರತ್ಯೇಕ ನಿಧಿಯನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು.
ಶಿಬಿರದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 15 ಕಲಾವಿದರು ಪಾಲ್ಗೊಂಡಿದ್ದಾರೆ. ವೇದಿಕೆಯಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಉಪಮೇಯರ್ ಡಾ.ಜೆ. ರೂಪಾ, ಉಪ ವಿಶೇಷಾಧಿಕಾರಿ ದೇವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ ಹಾಗೂ ಇತರರು ಇದ್ದರು.