ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಕಡಿತ

Gururaj
Published on

ಬೈಂದೂರು: ತಾಲೂಕು ಆಸ್ಪತ್ರೆಗಳಲ್ಲಿ ಎನ್‌ಎಚ್‌ಎಂ ಕಾರ್ಯಕ್ರಮದಡಿ ನೇಮಕಗೊಂಡಿರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಕಡಿತಗೊಳಿಸಲು ಆದೇಶ ಮಾಡಿರುವುದನ್ನು ಸರ್ಕಾರ ಹಿಂಪಡೆಯಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆಗ್ರಹಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರು ವಿಶ್ವಾಸ ಕಳೆದುಕೊಳ್ಳುವ ಹಂತದಲ್ಲಿರುವಾಗ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಕಡಿತ ಮಾಡಿದರೆ ಸರ್ಕಾರಿ ಆಸ್ಪತ್ರೆಗಳನ್ನೇ ಮುಚ್ಚಬೇಕಾದ ಪರಿಸ್ಥಿತಿ ಬರಬಹುದು. ಪ್ರಸ್ತುತ ತಾಲೂಕು ಆಸ್ಪತ್ರೆಗಳಲ್ಲಿ ಡಾಟಾ ಎಂಟ್ರಿ ಆಪರೇಟರ್‌ಗಳು ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಸರ್ಕಾರ ಪ್ರಸ್ತುತ ಹೊರಡಿಸಿರುವ ಆದೇಶದಿಂದಾಗಿ ಈ ಸಿಬ್ಬಂದಿಯನ್ನು ಕೈಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇದರಿಂದ ಮೊದಲೇ ಸಿಬ್ಬಂದಿ ಕೊರತೆಯಿಂದ ನಲುಗಿರುವ ತಾಲೂಕು ಆಸ್ಪತ್ರೆಗಳಿಗೆ ಕೊಡಲಿ ಪೆಟ್ಟು ನೀಡಿದಂತೆ ಆಗಿದೆ. ಇದು ಸರಿಯಾದ ಕ್ರಮವಲ್ಲ ಎಂದು ಸರ್ಕಾರದ ಕ್ರಮದ ಕುರಿತು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

ತಾಲೂಕು ಆಸ್ಪತ್ರೆಗಳಿಗೆ ಎನ್‌ಎಚ್‌ಎಂನಡಿ ಮಂಜೂರಾದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಕೈಬಿಡದೆ, ಹುದ್ದೆಗಳನ್ನು ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವರಿಗೆ ಹಾಗೂ ಸರ್ಕಾರಕ್ಕೆ ಗಂಟಿಹೊಳೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net