

ಶಿವಮೊಗ್ಗ: ಸಂವಿಧಾನದ ಪೀಠಿಕೆಯಿಂದ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ತೆಗೆಯಬೇಕೆಂಬ ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಯಲ್ಲಿ ತಪ್ಪೇನಿಲ್ಲ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಮರ್ಥಿಸಿಕೊಂಡರು.
ಹೊಸಬಾಳೆ ಹೇಳಿಕೆಯನ್ನು ವಿರೋಧಿಸುವ ಮುನ್ನ ಜಾತ್ಯತೀತ ಮತ್ತು ಸಮಾಜವಾದಿ ಎಂಬ ಎರಡು ಪದಗಳನ್ನು ಸಂವಿಧಾನದಲ್ಲಿ ಸೇರಿಸಿದ್ದು ಯಾರು? ಯಾವಾಗ? ಎಂಬುದನ್ನು ಹೇಳಬೇಕೆದು ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು. 1973ರಲ್ಲಿ ಕೇರಳ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಸಂವಿಧಾನದ ಮೂಲ ಸ್ವರೂಪವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರೂ ಅಂದು ಪ್ರಧಾನಿ ಆಗಿದ್ದ ಇಂದಿರಾ ಗಾಂಧಿ ಅವರು ಸಂವಿಧಾನದ ಮೂಲ ಪೀಠಿಕೆಯನ್ನು ಬದಲಾಯಿಸಿದ್ದು ನ್ಯಾಯಾಂಗದ ಮೇಲಿನ ದಾಳಿಯಲ್ಲವೇ ಎಂದು ಪ್ರಶ್ನಿಸಿದರು. ಜಾತ್ಯತೀತ ಮತ್ತು ಸಮಾಜವಾದಿ ಎಂಬ ಎರಡು ಪದಗಳನ್ನು ಇಂದಿರಾಗಾಂಧಿ ಅವರು ಸಂವಿಧಾನ ವಿರೋಧಿಯಾಗಿ ಪೀಠಿಕೆಯಲ್ಲಿ ಸೇರಿಸಿದ್ದಾರೆ. ಹೊಸಬಾಳೆ ಅವರು ಅದನ್ನು ತೆಗೆದುಹಾಕಿ ಎಂದಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಆದರೆ ಈ ಬಗ್ಗೆ ಸಂವಿಧಾನದ ಅರಿವೇ ಇಲ್ಲದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟೀಕೆ ಮಾಡುತ್ತಿದ್ದಾರೆ. ಆದರೆ ಜನರು ಮೂರ್ಖರಲ್ಲ ಎಂಬುದನ್ನು ಇವರೆಲ್ಲ ಅರ್ಥಮಾಡಿಕೊಳ್ಳಬೇಕು ಎಂದರು.
ಜಾತ್ಯತೀತ, ಸಮಾಜವಾದಿ ಪದಗಳನ್ನು ಸೇರಿಸುವ ವಿಷಯದಲ್ಲಿ ಸಂವಿಧಾನ ರಚನಾ ಸಭೆಯಲ್ಲಿಯೇ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಪ್ರಧಾನಿ ಜವಾಹರಲಾಲ್ ನೆಹರು ವಿರೋಧ ಮಾಡಿದ್ದರು. ಆದರೆ ಇಂದಿರಾ ಗಾಂಧಿ ಅದನ್ನು ಸೇರಿಸಿ ಅಂಬೇಡ್ಕರ್‌ಗೆ ಅವಮಾನ ಮಾಡಿದ್ದರು. ದೇಶದ ಮೇಲೆ ತುರ್ತುಪರಿಸ್ಥಿತಿ ಹೇರಿ ಕಾರ್ಯಾಂಗ, ನ್ಯಾಯಾಂಗ, ಪತ್ರಿಕಾ ರಂಗದ ಚಟುವಟಿಕೆಗಳನ್ನು ತನ್ನ ನಿಯಂತ್ರಣದಲ್ಲಿ ಇರುವಂತೆ ನೋಡಿಕೊಂಡ ಇಂದಿರಾಗಾಂಧಿ ಅವರು ಸಂವಿಧಾನದ ಮೂಲ ಸ್ವರೂಪವನ್ನೇ ಬದಲಾಯಿಸಿದರು. ಈಗಾಗಲಾದರೂ ಚರ್ಚೆ ಆಗಬೇಕು. ಕೆ.ಎಸ್.ಈಶ್ವರಪ್ಪ, ಮಾಜಿ ಡಿಸಿಎಂ