

ದಾವಣಗೆರೆ: ಜಿಲ್ಲೆಯ ಇಬ್ಬರು ಶಾಸಕರನ್ನು ನಿಗಮ, ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರಿಗೆ ಮಣೆ ಹಾಕಿದ್ದಾರೆ.
ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಅವರಿಗೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಸ್ಥಾನ ದೊರಕಿವೆ.
ಹಾಗೆ ನೊಡಿದರೆ ಇಬ್ಬರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಕಳೆದ ಬಾರಿ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಇವರ ಹೆಸರುಗಳು ಚರ್ಚೆಗೆ ಬಂದಿದ್ದವು.
ಆದರೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಪಕ್ಷಕ್ಕೆ ಬಂದವರಿಗೆ ಆದ್ಯತೆ ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾದ ಕಾರಣ ಸಿಎಂ ಬಿಎಸ್‌ವೈ ನಿಗಮ, ಮಂಡಳಿ ಅಧ್ಯಕ್ಷತೆ ನೀಡಿ ಉಭಯ ಶಾಸಕರನ್ನು ಸಮಾಧಾನಪಡಿಸಿದ್ದಾರೆ.
ಮಾಡಾಳು ವಿರೂಪಾಕ್ಷಪ್ಪ 2008ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಈಗ ಎರಡನೇ ಬಾರಿಗೆ ಶಾಸಕರಾಗಿದ್ದಾರೆ. ಹಿರಿತನದ ಆಧಾರದಲ್ಲಿ ಸಚಿವ ಸ್ಥಾನ ಸಿಗಬೇಕು ಎಂಬುದು ಅವರ ಕನಸು. ಹಿಂದೆ ಸಂಪುಟ ವಿಸ್ತರಣೆ ಸಂದರ್ಭ ತಾವೂ ಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡಿದ್ದರು. ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕ್ಷೇತ್ರದ ಕಾರ್ಯಕರ್ತರು ಸಿಎಂ ಬಳಿಗೆ ನಿಯೋಗ ಹೋಗಿದ್ದರು. ಈಗ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ.
ಎಸ್.ವಿ. ರಾಮಚಂದ್ರ ಈ ಹಿಂದೆ ಹಟ್ಟಿ ಚಿನ್ನದ ಗಣಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಈ ಬಾರಿ ಅವರಿಗೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರಕಿದೆ.
ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ, ಜಿಲ್ಲೆಗೊಂದು ಸಚಿವ ಸ್ಥಾನ ಸಿಗಬೇಕು ಎಂಬ ಬೇಡಿಕೆ ಆಗಾಗ ಕೇಳಿಬರುತ್ತಲೇ ಇದೆ. ಬೇರೆ ಜಿಲ್ಲೆಯವರು ಉಸ್ತುವಾರಿ ಸಚಿವರಾಗುವುದಕ್ಕಿಂತ ನಮ್ಮ ಜಿಲ್ಲೆಯವರೇ ಆದರೆ ಒಳ್ಳೆಯದು ಎಂಬ ಭಾವನೆ ವ್ಯಕ್ತವಾಗಿತ್ತು.
ಈಗ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕವಾಗಿದೆ. ಹಾಗಾಗಿ ಸಚಿವ ಸ್ಥಾನದ ವಿಚಾರ ಸದ್ಯಕ್ಕೆ ತಣ್ಣಗಾದಂತಾಗಿದೆ.