ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಲು ಆಗ್ರಹ

dvg-abvp.jpg
Published on

  ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ  ವಿಜಯವಾಣಿ ಸುದ್ದಿಜಾಲ ದಾವಣಗೆರೆ  ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು ಹಾಗೂ ಅರ್ಜಿ ಸಲ್ಲಿಸಿದ ಎಲ್ಲರಿಗೂ ಹಾಸ್ಟೆಲ್ ಸೀಟು ಸಿಗುವ ವ್ಯವಸ್ಥೆ ರೂಪಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.  ಜಯದೇವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.  ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಹಾಸ್ಟೆಲ್‌ಗಳಿವೆ. ಅರ್ಜಿ ಸಲ್ಲಿಸಿದವರಲ್ಲಿ ಶೇ. 40ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್ ಸೌಲಭ್ಯ ಸಿಗುತ್ತಿದೆ. ಶಿಕ್ಷಣ ಪಡೆಯಲು ಗ್ರಾಮೀಣ ಪ್ರದೇಶದಿಂದ ನಗರದ ಶಾಲೆ, ಕಾಲೇಜುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆ ಉಂಟಾಗುತ್ತಿದೆ. ಇರುವ ಹಾಸ್ಟೆಲ್‌ಗಳಲ್ಲಿ ಮೂಲಸೌಲಭ್ಯವೂ ಇಲ್ಲ ಎಂದು ದೂರಿದರು.  ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಶಾಲೆ, ಕಾಲೇಜು ಸಮಯಕ್ಕೆ ಸರಿಯಾದ ಬಸ್ ಸೌಲಭ್ಯ ಇಲ್ಲ. ವಿದ್ಯಾರ್ಥಿಗಳು ಹೆಚ್ಚಾಗಿ ಸಂಚರಿಸುವ ಮಾರ್ಗಗಳಲ್ಲಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.  ರಾಜ್ಯದಲ್ಲಿ ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ನಂಬಿ ಶಾಲೆ ಕಾಲೇಜು ಪ್ರವೇಶ ಪಡೆದಿದ್ದಾರೆ. ಆದರೆ, ಸರ್ಕಾರ ಸಕಾಲಕ್ಕೆ ವಿದ್ಯಾರ್ಥಿವೇತನ ಬಿಡುಗಡೆ ಮಾಡುತ್ತಿಲ್ಲ. ಕಳೆದ ವರ್ಷದ ಸೌಲಭ್ಯ ಇನ್ನೂ ಫಲಾನುಭವಿಗಳ ಕೈಸೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಎಬಿವಿಪಿ ಮುಖಂಡ ಪ್ರವೀಣ್ ಎಚ್.ಕೆ. ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net