

ದಾವಣಗೆರೆ : ಲಿಂಗತ್ವ ಅಲ್ಪಸಂಖ್ಯಾತ ಮತ್ತು ದಮನಿತ ಮಹಿಳೆಯರಿಗೂ ಸಮಾನ ಹಕ್ಕುಗಳು ಸಿಗಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ಸಹಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ, ಲಿಂಗತ್ವ ಅಲ್ಪಸಂಖ್ಯಾತ ಮತ್ತು ದಮನಿತ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜ ನೋಡುವ ದೃಷ್ಟಿಕೋನವೇ ಬೇರೆ. ಈ ರೀತಿ ತಾರತಮ್ಯ ಮಾಡದೇ ಪ್ರತಿಯೊಬ್ಬರನ್ನು ಸಮಾನ ದೃಷ್ಟಿಯಲ್ಲಿ ಕಾಣಬೇಕು. ಅವರು ಕೂಡ ಈ ವ್ಯವಸ್ಥೆಯ ಭಾಗ. ಎಲ್ಲರಂತೆ ಅವರಿಗೂ ಸಮಾನತೆ, ಸ್ವಾತಂತ್ರ್ಯದ ಹಕ್ಕುಗಳಿವೆ. ಅರ್ಹರಿಗೆ ಸರ್ಕಾರದ ಯೋಜನೆ, ಮೂಲ ಸೌಕರ್ಯಗಳು ಸಿಗಬೇಕು ಎಂದು ಅಭಿಪ್ರಾಯಪಟ್ಟರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎಂ.ಪೂರ್ಣಿಮಾ ಸ್ವಾಗತಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ, ಅಭಯ ಸ್ಪಂದನ ಸಂಸ್ಥೆ ಅಧ್ಯಕ್ಷೆ ಎಸ್.ಟಿ. ಚೈತ್ರಾ, ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ಅಧ್ಯಕ್ಷೆ ಶಾಂತಿಬಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗುರುಪ್ರಸಾದ್, ಸಖಿ ಒನ್ ಸ್ಟಾಪ್ ಸೆಂಟರ್ ಕಾನೂನು ಸಲಹೆಗಾರರಾದ ತಂಜಿಮಾ ಕೌಸರ್, ಮಹಿಳಾ ಸಬಲೀಕರಣ ಘಟಕ ಜಿಲ್ಲಾ ಸಂಯೋಜಕ ಜಗದೀಶ್ ಇದ್ದರು.