

ದಾವಣಗೆರೆ : ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಆ. 27ರಂದು ಹಮ್ಮಿಕೊಂಡಿರುವ ‘ರಾಜಭವನ ಚಲೋ’ ಹೋರಾಟದಲ್ಲಿ ಜಿಲ್ಲೆಯಿಂದ ಶೋಷಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಒಕ್ಕೂಟದ ಮುಖಂಡರು ಮನವಿ ಮಾಡಿದ್ದಾರೆ. ಒಕ್ಕೂಟದ ಮುಖಂಡ ಹೊದಿಗೆರೆ ರಮೇಶ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಡಾ ಹಗರಣವನ್ನು ನೆಪವಾಗಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಶೋಷಿತ ಸಮುದಾಯಗಳ ಮುಂಚೂಣಿ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆಗೆ ಮುಂದಾಗಿವೆ. ಕೇಂದ್ರ ಸರ್ಕಾರವು ರಾಜ್ಯಪಾಲರ ಮೇಲೆ ಒತ್ತಡ ಹಾಕಿ, ಸಿಎಂ ವಿರುದ್ಧ ತನಿಖೆಗೆ ಅನುಮತಿ ಕೊಡಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಪಾಲರ ನಡೆಯನ್ನು ವಿರೋಧಿಸಿ, ಆ. 27ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ರಾಜಭವನದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು. ಮಾಜಿ ಶಾಸಕ ಎಸ್. ರಾಮಪ್ಪ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯ್ಕ, ಪಾಲಿಕೆ ಸದಸ್ಯ ಚಮನ್ ಸಾಬ್, ನಾಯಕ ಸಮಾಜ ಅಧ್ಯಕ್ಷ ಬಿ. ವೀರಣ್ಣ, ಛಲವಾದಿ ಮಹಾಸಭಾದ ಎನ್. ರುದ್ರಮುನಿ ಸುದ್ದಿಗೋಷ್ಠಿಯಲ್ಲಿದ್ದರು.