

ದಾವಣಗೆರೆ: ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಪಾರ ಸಂಖ್ಯೆಯ ಅಭಿಮಾನಿಗಳು, ಸ್ನೇಹಿತರು, ಹಿತೈಷಿಗಳ ಸಮ್ಮುಖದಲ್ಲಿ ಶುಕ್ರವಾರ 56ನೇ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡರು.
ಬೆಳಗ್ಗೆ ಮನೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ನಂತರ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದ ಬಾಪೂಜಿ ಆರೋಗ್ಯ ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಯಿತು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಅವರೊಂದಿಗೆ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಪುತ್ರ ಸಮರ್ಥ ಶಾಮನೂರು, ಪುತ್ರಿ ಶ್ರೇಷ್ಠಾ ಶಾಮನೂರು ಇದ್ದರು.
ನಂತರ ಸಚಿವ ಮಲ್ಲಿಕಾರ್ಜುನ್, ತಮ್ಮ ನಿವಾಸದ ಬಳಿ ಫಲಾನುಭವಿ ರೈತರಿಗೆ ಹಸುಗಳನ್ನು ವಿತರಣೆ ಮಾಡಿದರು. ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಕೃಷಿ ಮತ್ತು ಪಶುಪಾಲನಾ ಇಲಾಖೆ ಅಧಿಕಾರಿಗಳು ಇದ್ದರು.
ತುರ್ಚಘಟ್ಟ ಗ್ರಾಮದಲ್ಲಿರುವ ನಿರಾಶ್ರಿತರ ಕೇಂದ್ರಕ್ಕೆ ಮಲ್ಲಿಕಾರ್ಜುನ್ ಭೇಟಿ ನೀಡಿ ಅಲ್ಲಿ ಕೆಲ ಹೊತ್ತು ಕಳೆದರು. ಜನ್ಮ ದಿನಾಚರಣೆ ಅಂಗವಾಗಿ ಎಸ್.ಒ.ಜಿ ಕಾಲನಿಯ ಸರ್ಕಾರಿ ಶಾಲೆ ಆವರಣದಲ್ಲಿ ಅನ್ನ ಸಂತರ್ಪಣೆ ನೆರವೇರಿಸಲಾಯಿತು. ಸಂಜೆ ನಗರದ ಎಂಸಿಸಿ ‘ಬಿ’ ಬ್ಲಾಕ್‌ನಲ್ಲಿ ನವೀಕರಿಸಿದ ಈಜುಕೊಳವನ್ನು ಉದ್ಘಾಟಿಸಿದರು. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ಬಾಸ್ಕೆಟ್‌ಬಾಲ್ ಪಂದ್ಯಾವಳಿಯ ಬಹುಮಾನ ವಿತರಣೆ ಮಾಡಿದರು.