ಎಸ್‌ಸಿಪಿ, ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ

bjp_20240224011131522.jpg
Published on

ದಾವಣಗೆರೆ : ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
 ಪಕ್ಷದ ಜಿಲ್ಲಾ ಕಚೇರಿಯಿಂದ ಮೆರವಣಿಗೆ ಆರಂಭಿಸಿದ ಮುಖಂಡರು ಹಾಗೂ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
 ಪರಿಶಿಷ್ಟರಿಗೆ ಮೀಸಲಿಟ್ಟಿದ್ದ 11,144 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ್ದು, ದಲಿತರ ಹಿತವನ್ನು ಬಲಿ ಕೊಟ್ಟಿದೆ. ಪರಿಶಿಷ್ಟರ ಹಿತರಕ್ಷಣೆ ಮಾಡಬೇಕಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅನ್ಯಾಯದ ವಿರುದ್ಧ ಸೊಲ್ಲೆತ್ತದೆ ಕಾಂಗ್ರೆಸ್‌ನ ಸ್ವಾರ್ಥಕ್ಕಾಗಿ ದಲಿತ ಸಮುದಾಯದ ಹಿತವನ್ನು ರಾಜಿ ಮಾಡಿಕೊಂಡಿದ್ದಾರೆ. ಸಂವಿಧಾನ ಜಾಥಾ ಮಾಡುತ್ತಿರುವ ಸರ್ಕಾರ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಬಸವರಾಜ ನಾಯ್ಕ ಆರೋಪಿಸಿದರು.
 ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಮಾತನಾಡಿ, ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿ ಯೋಜನೆಯೂ ಅಡ್ಡಿಯಾಗಿಲ್ಲ. ದಲಿತರ ಹಿತಾಸಕ್ತಿಗಿಂತ ಮತ ಬ್ಯಾಂಕ್ ರಾಜಕಾರಣ ಆದ್ಯತೆಯಾಗಿರುವುದು ಶೋಚನೀಯ ಸಂಗತಿ ಎಂದು ಹೇಳಿದರು.
 ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರಾಜಶೇಖರ್ ಮಾತನಾಡಿ, 9 ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ಪರಿಶಿಷ್ಟರಿಗೆ ಮಾತಿನಲ್ಲಿ ಮಾತ್ರ ಕಾಳಜಿ ತೋರಿ ವಂಚಿಸುತ್ತಿದೆ. ಪರಿಶಿಷ್ಟ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವೂ ದುರ್ಬಳಕೆಯಾಗಿ ಉನ್ನತ ಶಿಕ್ಷಣದಿಂದ ಅವರನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಯ ಸಲುವಾಗಿ ಸರ್ಕಾರ ಶಿಕ್ಷಣವನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು.
 ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿಸ್ವಾಮಿ, ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಕೆ. ಪ್ರಸನ್ನಕುಮಾರ್, ಮಾಜಿ ಮೇಯರ್ ಎಸ್.ಟಿ. ವೀರೇಶ್, ಮುಖಂಡರಾದ ಜಿ.ಎಸ್. ಅನಿತ್‌ಕುಮಾರ್, ಯಶವಂತರಾವ್ ಜಾಧವ್, ಐರಣಿ ಅಣ್ಣೇಶ್, ಧನಂಜಯ ಕಡ್ಲೆಬಾಳ್, ಅನಿಲ್ ಕುಮಾರ್ ನಾಯ್ಕ,  ವೀರೇಶ್ ಹನಗವಾಡಿ, ಬಿ.ಎಂ. ಸತೀಶ್, ಎಚ್.ಪಿ. ವಿಶ್ವಾಸ್, ಶಿವನಗೌಡ ಪಾಟೀಲ್, ಪಿ.ಸಿ. ಶ್ರೀನಿವಾಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net