ಜಗಳೂರಿಗೆ ಏಕಲವ್ಯ ಮಾದರಿ ಶಾಲೆ ತರುವೆ

bjp_20240424000308915.jpg
Published on

ದಾವಣಗೆರೆ : ಪ. ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಜಗಳೂರು ತಾಲೂಕಿನಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ತಿಳಿಸಿದರು.
 ಜಗಳೂರು ತಾಲೂಕಿನ ಹಾಲೇಕಲ್ಲು, ಬಿಳಿಚೋಡು, ಗುತ್ತಿದುರ್ಗ ಗ್ರಾಮದಲ್ಲಿ ಮಂಗಳವಾರ ಮತಯಾಚಿಸಿ ಮಾತನಾಡಿದರು.
 ದೇಶಾದ್ಯಂತ ಈಗಾಗಲೇ 467 ಏಕಲವ್ಯ ಮಾದರಿ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ಶಾಲೆಗಳ ಸಂಖ್ಯೆಯನ್ನು 1 ಸಾವಿರಕ್ಕೆ ಏರಿಸುವ ಸಂಕಲ್ಪವನ್ನು ಮೋದಿಜೀ ಸರ್ಕಾರ ಮಾಡಿದೆ ಎಂದು ಹೇಳಿದರು.
 ಸಂಸದ ಜಿ.ಎಂ. ಸಿದ್ದೇಶ್ವರ ಅವರು ಜಗಳೂರು ತಾಲೂಕಿಗೆ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದಾರೆ.  ಇದಕ್ಕಾಗಿ ಈಗಾಗಲೇ ಮಾಗಡಿ ಬಳಿ 10 ಎಕರೆ ಜಮೀನು ಗುರುತಿಸಲಾಗಿದ್ದು, ಶಾಲೆ ನಿರ್ಮಾಣಕ್ಕೆ ಒತ್ತು ನೀಡುತ್ತೇನೆ ಎಂದರು.
 ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಮಾತನಾಡಿ, ಜಗಳೂರು ಅತ್ಯಂತ ಹಿಂದುಳಿದ ತಾಲೂಕಾಗಿದ್ದು, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಂಸದ ಸಿದ್ದೇಶಣ್ಣ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಕೊಟ್ಟಿದ್ದು, ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದರು.
 ಮಾಜಿ ಶಾಸಕ ಎಚ್.ಪಿ. ರಾಜೇಶ್ ಮಾತನಾಡಿ, ಕಾರ್ಯಕರ್ತರು ಕ್ಷೇತ್ರದಲ್ಲಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಗೆಲ್ಲಿಸುವ ಮೂಲಕ ದೇಶದಲ್ಲಿ ಮತ್ತೊಮ್ಮೆ ಮೋದಿ ಯುಗಕ್ಕೆ ಹೊಸ ಭಾಷ್ಯ ಬರೆಯಬೇಕು ಎಂದು ತಿಳಿಸಿದರು.
 ಜೆಡಿಎಸ್ ಮುಖಂಡ ಕಲ್ಲೇರುದ್ರೇಶ್ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತ ಕಂಡು ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ 28 ಕ್ಷೇತ್ರದಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದರು.
 ಬಿಜೆಪಿ ಯುವ ಮುಖಂಡ ಜಿ.ಎಸ್. ಅನಿತ್‌ಕುಮಾರ್, ಪಲ್ಲಾಗಟ್ಟಿ ಮಹೇಶ್, ಇಂದಿರಾ ರಾಮಚಂದ್ರ, ರೂಪಾ, ವಿಜಯಲಕ್ಷ್ಮಿ, ಮಂಡಲದ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಬೂತ್ ಮಟ್ಟದ ಅಧ್ಯಕ್ಷರು, ಗ್ರಾಮದ ಬಿಜೆಪಿ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net