

ದಾವಣಗೆರೆ : ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಆಗಿರುವ ಮೋಸವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದ ಸಮಿತಿಗೆ ವಿವರಿಸಿದ್ದೇವೆ ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಆಗಿರುವ ಕೆಲ ವ್ಯತ್ಯಾಸಗಳನ್ನು ಸರಿದೂಗಿಸುವ ಕೆಲಸವನ್ನು ಪ್ರಲ್ಹಾದ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂಗೌಡ ಅವರು ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬಗ್ಗೆ ಚರ್ಚಿಸಿಲ್ಲ ಎಂದು ತಿಳಿಸಿದರು. ಪಕ್ಷಕ್ಕೆ ಯಾವುದೇ ಮುಜುಗರ ಆಗುವ ರೀತಿ ನಾವು ನಡೆದುಕೊಳ್ಳುವುದಿಲ್ಲ. ಬಿಜೆಪಿಯಲ್ಲಿ ಇರುವ ಸಮಸ್ಯೆಗಳನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರ ಗಮನಕ್ಕೆ ತರುತ್ತೇವೆ. ಪಕ್ಷದ ಚೌಕಟ್ಟಿನೊಳಗೆ ಹೋರಾಟ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಜಿ.ಎಂ. ಸಿದ್ದೇಶ್ವರ ಅವರು ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬುದಾಗಿ ವದಂತಿ ಹರಡಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ. ಜಿಲ್ಲೆಯಲ್ಲಿ ಪಕ್ಷ ಕಟ್ಟಿ ಬೆಳೆಸಿದ ಅವರ ಕುಟುಂಬದ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ರಾಜಕಾರಣದಲ್ಲಿ ಹುಡುಗಾಟಿಕೆ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.