

ದಾವಣಗೆರೆ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ಭವಾನಿ ಕಲ್ಯಾಣ ಮಂಟಪದ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷ ಫೆ. 19ರಂದು ಶಿವಾಜಿ ಜಯಂತಿ ಆಚರಿಸಲಾಗುತ್ತಿತ್ತು. ದೇವರಾಜ ಅರಸು ಬಡಾವಣೆಯ ‘ಬಿ’ ಬ್ಲಾಕ್‌ನಲ್ಲಿ ಸಮಾಜದ ವತಿಯಿಂದ ನಿರ್ಮಿಸಿದ ಭವಾನಿ ಕಲ್ಯಾಣ ಮಂಟಪದ ಉದ್ಘಾಟನೆಯ ದೃಷ್ಟಿಯಿಂದ ಜಯಂತಿಯನ್ನು ಎರಡು ದಿನ ತಡವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಗುರುವಾರ ರಾತ್ರಿಯಿಂದಲೇ ಧಾರ್ಮಿಕ ಪೂಜಾ ಕೈಂಕರ್ಯಗಳು ಆರಂಭವಾಗಲಿವೆ. ಭವಾನಿ ಪೀಠದ ಮಂಜುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಪಾಲ್ಗೊಳ್ಳಲಿದ್ದಾರೆ ಎಂದರು. ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಮಾಲತೇಶರಾವ್ ಜಾಧವ್, ಮುಖಂಡರಾದ ಸತೀಶ್ ಜಾಧವ್, ಗಣೇಶ್ ರಾವ್, ಯಲ್ಲಪ್ಪ, ರಾಮಚಂದ್ರರಾವ್ ಇದ್ದರು.