

ದಾವಣಗೆರೆ : ಕಾಂಗ್ರೆಸ್ ಸರ್ಕಾರದ ಬಗ್ಗೆ ವಿಪಕ್ಷಗಳು ಸುಖಾಸುಮ್ಮನೆ ಟೀಕೆ ಮಾಡುತ್ತಿವೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜತೆಗೆ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿವೆ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಹರಿಹಾಯ್ದರು. ನಗರದ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ, 1350 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಏನೂ ಅಭಿವೃದ್ಧಿ ಮಾಡುತ್ತಿಲ್ಲ, ಸರ್ಕಾರದ ಬಳಿ ಹಣ ಇಲ್ಲ ಎಂದು ದೂರುವವರಿಗೆ ದಾವಣಗೆರೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಉತ್ತರವಾಗಿದೆ. ಹಣವೇ ಇಲ್ಲದಿದ್ದರೆ ಇಷ್ಟು ಕೆಲಸ ಮಾಡಲು ಆಗುತ್ತಿತ್ತೆ ಎಂದು ಪ್ರಶ್ನಿಸಿದರು. ಹಾವು-ಮುಂಗುಸಿಯಂತಿದ್ದ ಬಿಜೆಪಿ ಹಾಗೂ ಜೆಡಿಎಸ್‌ನವರು ಈಗ ಒಂದಾಗಿ ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಫ ಮಾಡುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದರು. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಸಂದರ್ಭದಲ್ಲಿ ಇದರಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದರು. ಈಗ ಬಿಜೆಪಿಯವರೇ ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶಗಳಲ್ಲಿ ನಮ್ಮ ಗ್ಯಾರಂಟಿ ಯೋಜನೆ ಕಾಪಿ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು. ರಾಜ್ಯದ ಬಜೆಟ್ ಗಾತ್ರವು 3.71 ಲಕ್ಷ ಕೋಟಿ ರೂ.ಗಳಿಂದ 4.09 ಲಕ್ಷ ಕೋಟಿ ರೂ.ಗಳಿಗೆ ಹಿಗ್ಗಿದೆ. 2024-25 ರಲ್ಲಿ 51 ಸಾವಿರ ಕೋಟಿ ರೂ. ಬಂಡವಾಳ ವೆಚ್ಚ (ಕ್ಯಾಪಿಟಲ್ ಎಕ್ಸ್‌ಪೆಂಡಿಚರ್) ಮಾಡಲಾಗಿತ್ತು. 2025-26 ರಲ್ಲಿ ಅದು 83 ಸಾವಿರ ಕೋಟಿಗೆ ಏರಿಎಯಾಗಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 53 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲಿ 1 ಸಾವಿರದಿಂದ 2500 ಕೋಟಿ ರೂ. ವರೆಗೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಬಿಜೆಪಿ ಸರ್ಕಾರ ಇದ್ದಾಗ ಒಂದು ಮನೆಯನ್ನೂ ಕಟ್ಟಿ ಕೊಡಲಿಲ್ಲ. ನಾವು ದಾವಣಗೆರೆ ಒಂದರಲ್ಲೇ ಪೌರ ಕಾರ್ಮಿಕರಿಗೆ 1892 ಮನೆಗಳನ್ನು ಕಟ್ಟಿದ್ದೇವೆ ಎಂದು ಸಾಧನೆಗಳನ್ನು ಪಟ್ಟಿ ಮಾಡಿದ ಅವರು, ಬಿಜೆಪಿಯರವಿಗೆ ನಾಚಿಕೆಯಾಗಬೇಕು ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸ್ವಾಗತಿಸಿದರು. ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲೆಯ ಶಾಸಕರು, ಮುಖಂಡರು ಇದ್ದರು.