

ದಾವಣಗೆರೆ : ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ತೋರದೇ ರಾಜ್ಯಗಳಿಗೆ ನಿಗದಿಯಾದ ತೆರಿಗೆ ಪಾಲನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಕಾನೂನು ವಿಭಾಗ ಆಗ್ರಹಿಸಿದೆ. ಪಕ್ಷದ ಕಾನೂನು ವಿಭಾಗದ ಜಿಲ್ಲಾಧ್ಯಕ್ಷ ಪ್ರಕಾಶ್ ಪಾಟೀಲ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯಾದ ಬಳಿಕ ತೆರಿಗೆ ಸಂಗ್ರಹದಲ್ಲಿ ರಾಜ್ಯಗಳಿಗೆ ಇದ್ದ ಹಕ್ಕು ಮೊಟಕುಗೊಂಡಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಸಂಗ್ರಹವಾಗುವ ತೆರಿಗೆಯನ್ನು ನಿಗದಿಯಂತೆ ಹಂಚಿಕೆ ಮಾಡಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಾಡುತ್ತಿರುವ ತಾರತಮ್ಯದಿಂದ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ತೆರಿಗೆ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಆ. 1ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ ಸೇರಿ ರಾಜ್ಯದ ವಿವಿಧ ಜಿಲ್ಲೆಯಿಂದ ನೂರಾರು ವಕೀಲರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದರು. ಕಾನೂನು ಘಟಕದ ಮುಖಂಡರಾದ ಬಿ.ಜಿ. ಚಂದ್ರಶೇಖರ್, ಎಲ್.ಎಚ್. ಪ್ರದೀಪ್, ಜಯಕುಮಾರ್ ಇದ್ದರು.