ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ

db.jpg
Published on

ದಾವಣಗೆರೆ : ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದರು.
 ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ, ಜಿಲ್ಲಾ ಕಾಂಗ್ರೆಸ್ ಇಂಟೆಕ್ ಕಾರ್ಮಿಕ ಮುಖಂಡರ ಸಭೆಯಲ್ಲಿ ಮಾತನಾಡಿದರು.
 ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿದ್ದು ಬಡವರ ಜೀವನ ನೆಮ್ಮದಿಯಾಗಿ ನಡೆಯುತ್ತಿದೆ. ಸಮಾಜದ ಎಲ್ಲ ವರ್ಗದ ಜನರಿಗೂ ಸರ್ಕಾರದಿಂದ ಉತ್ತಮ ಸವಲತ್ತು ದೊರೆಯುತ್ತಿದೆ. ಲೋಕಸಭಾ ಚುನಾವಣೆಗೆ ಇದು ಸಹಕಾರಿಯಾಗಲಿದೆ ಎಂದು ಹೇಳಿದರು.
 ನರೇಂದ್ರ ಮೋದಿ ಅವರ ಆಡಳಿತದಲ್ಲಿ ಬೆಲೆಗಳು ಗಗನಕ್ಕೇರಿವೆ. 400 ರೂ.ಗೆ ಸಿಗುತ್ತಿದ್ದ ಅಡುಗೆ ಅನಿಲ ಸಿಲಿಂಡರ್ ಈಗ ಸಾವಿರ ರೂ. ಆಗಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ದುಪ್ಪಟ್ಟಾಗಿವೆ. ಜನಸಾಮಾನ್ಯರ ಜೀವನ ದುಸ್ತರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
 ವೀಕ್ಷಕರಾಗಿ ಆಗಮಿಸಿದ್ದ ಕೆಪಿಸಿಸಿ ಇಂಟಕ್ ವಿಭಾಗದ ಪ್ರಧಾನ ಕಾರ್ಯದರ್ಶಿ ಶೌಕತ್ ಅಲಿ ಮಾತನಾಡಿ ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ರಾಜ್ಯ ಇಂಟೆಕ್ ಸಮಾವೇಶ ನಡೆಯಲಿದ್ದು ದಾವಣಗೆರೆ ಜಿಲ್ಲೆಯಿಂದ ಕನಿಷ್ಠ 500 ಜನ ಕಾರ್ಮಿಕರು ಭಾಗವಹಿಸಬೇಕೆಂದು ಮನವಿ ಮಾಡಿದರು.
 ಕೆಪಿಸಿಸಿಯ ಮತ್ತೊಬ್ಬ ವೀಕ್ಷಕಿ ಸರ್ವಮಂಗಳಾ ಮಾತನಾಡಿ ಮಹಿಳಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದರು. ಜಿಲ್ಲಾ ಕಾಂಗ್ರೆಸ್ ಇಂಟಕ್ ವಿಭಾಗದ ಅಧ್ಯಕ್ಷ ಕೆ.ಎಂ. ಮಂಜುನಾಥ್, ಹರಿಹರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net