

ದಾವಣಗೆರೆ: ಇಲಾಖೆಗಳಿಂದ ಅನುಷ್ಠಾನ ಮಾಡಲಾಗುತ್ತಿರುವ ಯೋಜನೆಗಳ ರೂಪುರೇಷೆ ಕುರಿತಂತೆ ಕೈಪಿಡಿ ಸಿದ್ಧಪಡಿಸಿ ಸಾರ್ವಜನಿಕರಿಗೆ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಗುರುವಾರ, ವಿವಿಧ ಇಲಾಖೆಗಳಿಂದ ಅನುಷ್ಠಾನ ಮಾಡಲಾಗುತ್ತಿರುವ ಯೋಜನೆಗಳು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಮುಂದಿನ ಎರಡು ತಿಂಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ರೂಪುರೇಷೆ ಕುರಿತ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಯೋಜನೆಗಳ ಹೆಸರು, ಅರ್ಹತೆ, ಸೌಲಭ್ಯಗಳು, ಪಡೆಯುವ ಮಾನದಂಡಗಳೇನು ಎನ್ನುವ ಬಗ್ಗೆ ಕೈಪಿಡಿಯಲ್ಲಿ ಮಾಹಿತಿ ಇರಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಾಸ್ಟೆಲ್ ಸೌಲಭ್ಯ, ವಿದ್ಯಾರ್ಥಿವೇತನ, ಎಸ್.ಎಸ್.ಎಲ್.ಸಿ.ಯಿಂದ ಉನ್ನತ ಶಿಕ್ಷಣದವರೆಗೆ ಪ್ರೋತ್ಸಾಹಧನ, ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿ ಅನೇಕ ಕಾರ್ಯಕ್ರಮಗಳಿವೆ. ಕಾರ್ಮಿಕ ಇಲಾಖೆಯಲ್ಲಿಯೂ ಸಂಘಟಿತ, ಅಸಂಘಟಿತ ಕಾರ್ಮಿಕರಿಗೆ ಅನೇಕ ಸೌಲಭ್ಯಗಳಿದ್ದು ಅವುಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವುದು ಮುಖ್ಯವಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ, ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ, ನರೇಗಾ, ಎನ್.ಆರ್.ಎಲ್.ಎಂ, ಕಾರ್ಮಿಕ ಇಲಾಖೆ, ಬಿಸಿಎಂ, ಸಾಮಾಜಿಕ ಭದ್ರತಾ ಯೋಜನೆಗಳು ಸೇರಿ ಅನೇಕ ಇಲಾಖೆಗಳಿಂದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ಆದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಯೋಜನೆಗಳು ಸಿಗಬೇಕೆನ್ನುವುದು ಪ್ರಾಧಿಕಾರದ ಗುರಿಯಾಗಿದೆ ಎಂದು ಹೇಳಿದರು.
ಸರ್ಕಾರ ಸಮಾಜದ ಸುಧಾರಣೆಗಾಗಿ ಹಲವು ಕಾನೂನುಗಳನ್ನು ಜಾರಿಗೆ ತಂದಿದ್ದರೂ ಅವುಗಳ ಸಮರ್ಪಕ ಅನುಷ್ಠಾನವಾಗದೆ ಇಂದಿನ ಯುವ ಜನರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಕಾಯ್ದೆ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕಾಗಿದೆ ಎಂದು ತಿಳಿಸಿದರು.
ಶಾಲಾ ಕಾಲೇಜುಗಳ ಹಂತದಲ್ಲಿಯೇ ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಯಿಂದ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.
ಪ್ರಕೃತಿ ವಿಕೋಪ ಪರಿಸ್ಥಿತಿಗಳು ಸಂಭವಿಸಿದಾಗ ತಕ್ಷಣ ಸ್ಪಂದಿಸುವ ತಂಡ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರೊಂದಿಗೆ ಸಂವಹನ ಕ್ರಮಗಳನ್ನು ಅನುಸರಿಸಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಪಾಲಿಕೆಯಿಂದ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಹರಿಸಿ ಮಳೆಗಾಲವಾಗಿರುವುದರಿಂದ ಡೆಂೆ, ಚಿಕುನ್‌ಗುನ್ಯ ಹರಡದಂತೆ ಕ್ರಮ ವಹಿಸಲು ಸೂಚನೆ ನೀಡಲಾಯಿತು.
ಸೆ. 9 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಾನೂನು ಸೇವಾ ಮತ್ತು ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಏರ್ಪಡಿಸಲು ಉದ್ದೇಶಿಸಲಾಗಿದೆ. ಮಾದಕ ವಸ್ತುಗಳಿಂದ ಯುವ ಜನರನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರಣ್ಣವರ ವಿವಿಧ ಇಲಾಖೆಗಳಲ್ಲಿ ರೂಪಿಸಲಾದ ಕ್ರಿಯಾ ಯೋಜನೆಗಳ ಮಾಹಿತಿ, ಅನುಷ್ಠಾನ ಮಾನದಂಡಗಳ ಬಗ್ಗೆ ಮಾಹಿತಿ ಪಡೆದರು.
ಹಿರಿಯ ಸಿವಿಲ್ ನ್ಯಾಯಾಧೀಶ ಶಿವಪ್ಪ ಸಲಗೇರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಸರ್ಕಾರಿ ಅಭಿಯೋಜಕ ಇಲಾಖೆ ಉಪನಿರ್ದೇಶಕಿ ಕಲ್ಪನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಇನ್ನಿತರ ಅಧಿಕಾರಿಗಳು, ಜಿಲ್ಲಾ ಸರ್ಕಾರಿ ವಕೀಲ ನವೀನ್, ಸಮಿತಿ ಸದಸ್ಯ ರೂಪಾನಾಯ್ಕ ಇದ್ದರು.