

ದಾವಣಗೆರೆ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಜು. 12 ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಡಿ.ಕೆ. ವೇಲಾ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಿ ಸಂಧಾನ ನಡೆಸಲು ನ್ಯಾಯಾಂಗ ಇಲಾಖೆ ಮತ್ತು ವಕೀಲರ ಕಡೆಯಿಂದಲೂ ಪ್ರತ್ಯೇಕವಾಗಿ ಮಧ್ಯಸ್ಥಗಾರರು ಇರುತ್ತಾರೆ ಎಂದು ತಿಳಿಸಿದರು. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ, ಬ್ಯಾಂಕ್, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ, ಕೌಟುಂಬಿಕ ನ್ಯಾಯಾಲಯ ಪ್ರಕರಣಗಳನ್ನು, ಪಿಂಚಣಿ, ಕಂದಾಯ ಪ್ರಕರಣಗಳು ಬಗೆಹರಿಸಲಾಗುವುದು ಎಂದರು. ಜು. 12 ರ ಎರಡನೇ ಶನಿವಾರ ಬೇರೆ ಯಾವುದೇ ಕಲಾಪಗಳು ನಡೆಯದೇ ಸಂಪೂರ್ಣವಾಗಿ ಲೋಕ್ ಅದಾಲತ್ ಪ್ರಕರಣಗಳ ರಾಜಿ ಸಂಧಾನ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ನ್ಯಾಯಾಧೀಶರು ವಕೀಲರ ಸಹಕಾರದೊಂದಿಗೆ ಕಲಾಪ ನಡೆಸುವರು. ತಾಲೂಕು ಮಟ್ಟದಲ್ಲೂ ಅದಾಲತ್ ನಡೆಯಲಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಎಸ್ಪಿ ಉಮಾ ಪ್ರಶಾಂತ್ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್, ಕಾರ್ಯದರ್ಶಿ ಬಸವರಾಜ್ ಇದ್ದರು.