

ದಾವಣಗೆರೆ: ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಿಗೆ ಸಿಬ್ಬಂದಿ ನೇಮಕಾತಿಯಲ್ಲಿ ಶ್ರವಣದೋಷವುಳ್ಳವರನ್ನು ಪರಿಗಣಿಸುವಂತೆ ಆಗ್ರಹಿಸಿ ಜಿಲ್ಲಾ ಶ್ರವಣದೋಷವುಳ್ಳವರ ಸಂಘದ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಪ್ರತಿಭಟನಕಾರರು ಲೋಕಸಭಾ ಚುನಾವಣೆಗೂ ಮುನ್ನ ನೀಡಿದ ಆಶ್ವಾಸನೆ ಈಡೇರಿಸಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವಾಗ ಶ್ರವಣದೋಷ ಉಳ್ಳವರನ್ನು ಪರಿಗಣಿಸುವಂತೆ ಸರ್ಕಾರ ಸೂಚನೆ ನೀಡಿದ್ದರೂ ನಿರ್ಲಕ್ಷೃ ವಹಿಸಲಾಗಿದೆ ಎಂದು ದೂರಿದರು. ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಶ್ರವಣದೋಷವುಳ್ಳವರನ್ನು ನೇಮಕಾತಿಗೆ ಪರಿಗಣಿಸುತ್ತಿಲ್ಲ. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಸಂಪೂರ್ಣ ಅಲಕ್ಷಿಸಲಾಗಿದೆ. ಅಂಗವಿಕಲರ ಕಲ್ಯಾಣ ಇಲಾಖೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ತಿಳಿಸಿದರು. ಇಲಖೇಯು ಸರ್ಕಾರಿ ಸಾಲ ಸೌಲಭ್ಯಗಳನ್ನು ತಲುಪಿಸುವಲ್ಲಿ ವಿಫಲವಾಗಿದೆ. ಅನರ್ಹರು ಸರ್ಕಾರಿ ಸೌಲಭ್ಯ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶ್ರವಣದೋಷವುಳ್ಳ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿಲ್ಲ. ಇಂತಹ ಶಿಕ್ಷಣ ಸಂಸ್ಥೆಗಳಿಗೆ ನೀಡುತ್ತಿರುವ ಅನುದಾನ ಸದ್ಬಳಕೆ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ ಎಸ್.ಆಸೀಫ್, ಪ್ರಧಾನ ಕಾರ್ಯದರ್ಶಿ ಬಿ.ಕೆ.ಪಿ. ರಾಜಶೇಖರ್, ಖಜಾಂಚಿ ಎಸ್. ಪ್ರದೀಪ್, ರೇಣುಕಾ, ಗಿರೀಶ್, ದುರುಗೇಶ್ ಇದ್ದರು.