

ದಾವಣಗೆರೆ : ಡೆಂಘೆ ನಿಯಂತ್ರಣದ ಬಗ್ಗೆ ಜನರಿಗೆ ಜಾಗೃತಿ ಇದ್ದಾಗ ರೋಗವನ್ನು ನಿಯಂತ್ರಣದಲ್ಲಿಡಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದರು.
ರಾಷ್ಟ್ರೀಯ ಡೆಂಘೆ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೀಟಜನ್ಯ ರೋಗಗಳ ನಿಯಂತ್ರಣ ಅಧಿಕಾರಿ ಕಚೇರಿಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಘೆ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಮಾತನಾಡಿದರು.
ನಿಂತ ನೀರು ಸೊಳ್ಳೆಗಳ ತವರು. ಡೆಂಘೆ ಜ್ವರ ಈಡಿಸ್ ಎಂಬ ಸೊಳ್ಳೆಯಿಂದ ಹರಡುತ್ತದೆ. ನೀರಿನ ಸಂಗ್ರಹದ ಪರಿಕರಗಳನ್ನು ವಾರಕ್ಕೆ ಎರಡು ಬಾರಿ ಸ್ವಚ್ಛಗೊಳಿಸಿ, ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರಿನ ಪರಿಕರಗಳಲ್ಲಿನ ಬಾಲ ಹುಳುಗಳೇ ಸೊಳ್ಳೆ. ಇವುಗಳ ಉತ್ಪತ್ತಿಯನ್ನು ನಿಯಂತ್ರಣದಲ್ಲಿಟ್ಟು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ ಡೆಂಘೆ ಮಹಾ ಮಾರಿಯನ್ನು ಸೋಲಿಸಿ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣದಿಂದ ಆರಂಭವಾದ ಜಾಥಾ ಕೆ.ಆರ್. ರಸ್ತೆ, ಬಾಷಾನಗರ ಮೂಲಕ ತೆರಳಿ ನಗರ ಆರೋಗ್ಯ ಕೇಂದ್ರದ ಬಳಿ ಮುಕ್ತಾಯವಾಯಿತು. ಭಿತ್ತಿ ಪತ್ರಗಳನ್ನು ಹಿಡಿದು, ಘೋಷಣೆ ಕೂಗುವ ಮೂಲಕ ಹಾಗೂ ಆಡಿಯೊ ಸಂದೇಶಗಳ ಮೂಲಕ ಡೆಂಘೆ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಕೆ.ಎಚ್. ಗಂಗಾಧರ್, ದಾವಣಗೆರೆ ತಾಲೂಕು ಆರೋಗ್ಯ ಅಧಿಕಾರಿ ಡಾ. ದೇವರಾಜ್ ಪಟಗೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಅಧೀಕ್ಷಕಿ ಡಾ.ಮಧು, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಸುರೇಶ್ ಬಾರ್ಕಿ, ಆರ್‌ಸಿಎಚ್ ಅಧಿಕಾರಿ ಡಾ. ರೇಣುಕಾ ಆರಾಧ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಕುಟುಂಬ ಕಲ್ಯಾಣ ಅಧಿಕಾರಿ ಡಾ. ರುದ್ರಸ್ವಾಮಿ ಹಾಗೂ ನಗರ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಸಿಬ್ಬಂದಿ, ಮತ್ತು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.