

ದಾವಣಗೆರೆ : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಇಂಗ್ಲಿಷ್ ಭಾಷೆಯನ್ನೇ ಹೆಚ್ಚು ಬಳಸಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಖಂಡಿಸಿದೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ, ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲೇ ಪಡೆದಿದ್ದಾರೆ. ಜಿಲ್ಲೆಯ ಬಹಳಷ್ಟು ಅಧಿಕಾರಿಗಳು ಇಂಗ್ಲಿಷ್ ನಲ್ಲೇ ಉತ್ತರಿಸಿದ್ದು ಸರಿಯಲ್ಲ ಎಂದು ವೇದಿಕೆ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೇರೆ ರಾಜ್ಯಗಳಿಂದ ಬಂದ ಅಧಿಕಾರಿಗಳು ಮೂರು ತಿಂಗಳ ಒಳಗಾಗಿ ಕನ್ನಡ ಕಲಿತು ತಮ್ಮ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಬೇಕೆಂಬ ಸರ್ಕಾರದ ಆದೇಶವಿದ್ದರೂ ಅದನ್ನು ಗಾಳಿಗೆ ತೂರಲಾಗುತ್ತದೆ. ಕನ್ನಡ ಕಲಿಯದೇ ಇರುವುದು ಇವರಿಗೆ ಕನ್ನಡದ ಮೇಲೆ ಎಷ್ಟರ ಮಟ್ಟಿಗೆ ಪ್ರೇಮ ಇದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಇಂತಹ ಅಧಿಕಾರಿಗಳ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಡೆಯುವ ಇಂತಹ ಸಭೆಗಳ ಮೇಲೆ ವೇದಿಕೆ ದಾಳಿ ನಡೆಸಿ ಅಧಿಕಾರಿಗಳಿಗೆ ಘೇರಾವ್ ಮಾಡಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ
ಕನ್ನಡ ಭಾಷೆ ಬಾರದ ಅಧಿಕಾರಿಗಳಿಗೆ ಮುಂದಿನ ದಿನಗಳಲ್ಲಿ ಕರವೇಯಿಂದ ಕನ್ನಡ ಕಲಿಕೆ ಪುಸ್ತಕ ನೀಡಲಾಗುವುದೆಂದು ತಿಳಿಸಿದ್ದಾರೆ.