ಸ್ವಂತ ಸಂಪನ್ಮೂಲಗಳ ಕ್ರೋಡೀಕರಣಕ್ಕೆ ಒತ್ತು

dvg-finance-comision.jpg
Published on

ದಾವಣಗೆರೆ  : ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳು ಸ್ವಂತ ಸಂಪನ್ಮೂಲಗಳ ಕ್ರೋಡೀಕರಣಕ್ಕೆ ಒತ್ತು ನೀಡುವ ಅಗತ್ಯವಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣ ಸ್ವಾಮಿ ಅಭಿಪ್ರಾಯಪಟ್ಟರು.  ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ಮತ್ತು ಗ್ರಾಮ ಪಂಚಾಯಿತಿಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.  ಆಯೋಗದಿಂದ ಅನೇಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಸಮಾಲೋಚನಾ ಸಭೆಗಳು ಮತ್ತು ಅಧ್ಯಯನ ಕೈಗೊಳ್ಳಲಾಗಿದೆ. ಈ ಮೂಲಕ ಗ್ರಾಮ ಪಂಚಾಯಿತಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು  ತಿಳಿಸಿದರು.  ಸ್ಥಳೀಯ ಸಂಸ್ಥೆಗಳು ಸ್ವಂತ ಸಂಪನ್ಮೂಲಗಳನ್ನು ಕ್ರೋಡೀಕರಿಸಿಕೊಂಡು ಜನರಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸುವಷ್ಟು ಸಾಮರ್ಥ್ಯ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಆಯೋಗವು ವಿವರವಾದ ವರದಿಯನ್ನು ಸರ್ಕಾರಕ್ಕೆ ನೀಡಲಿದೆ ಎಂದರು. ಮೊದಲ ಕಂತಿನ ವರದಿಯ ಪುಸ್ತಕಗಳನ್ನು ಇದೇ ಸಂದರ್ಭದಲ್ಲಿ ಹಾವೇರಿ ಮತ್ತು ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ವಿತರಣೆ ಮಾಡಿದರು.  ಆಯೋಗವು ರಾಜ್ಯ ಸರ್ಕಾರ ತೆರಿಗೆ, ಸುಂಕ ಹಾಗೂ ಶುಲ್ಕ ಸಂಗ್ರಹದ ಮೂಲಕ ಗಳಿಸುವ ಆದಾಯವನ್ನು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‌ರಾಜ್ ಸಂಸ್ಥೆಗಳ ನಡುವೆ ಸಮರ್ಪಕವಾಗಿ ಹಂಚಿಕೆ ಮಾಡುವ ಕುರಿತು ಶಿಫಾರಸು ಮಾಡುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net