

ದಾವಣಗೆರೆ : ತಾಲೂಕಿನ ಕೊಗ್ಗನೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರದಲ್ಲಿ ಬೂಸ್ಟ್ ಹಿಡಿದ ಬೆಲ್ಲ, ಕಳಪೆ ಸಾಂಬಾರು ಪುಡಿ, ರವೆ ಸೇರಿ ಎಲ್ಲ ರೀತಿಯ ಆಹಾರ ಪದಾರ್ಥ ಕಳಪೆಯಾಗಿರುವುದನ್ನು ಕಂಡು ಗರಂ ಆದರು.
ಮಕ್ಕಳ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಸಲು ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಆದರೆ, ಇಲ್ಲಿ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಆಹಾರ ತಯಾರಿಸಲಾಗುತ್ತಿದೆ. ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ? ಎಂದು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹಾಗೂ ಸಿಬ್ಬಂದಿಗೆ ಪ್ರಶ್ನಿಸಿದರು.
ಕೇಂದ್ರದಲ್ಲಿ ಕೇವಲ ಇಬ್ಬರು ಮಕ್ಕಳಿದ್ದು, ಮಧ್ಯಾಹ್ನವಾದರೂ ಮಕ್ಕಳ ಹಾಜರಿ ಹಾಕಿಲ್ಲ. ಸಂಜೆ ವೇಳೆಗೆ ಅವರಿಗೆ ಇಷ್ಟ ಬಂದಷ್ಟು ಮಕ್ಕಳ ಹಾಜರಿ ಹಾಕಲಾಗುತ್ತಿದೆ. ಸ್ಟಾಕ್ ಪುಸ್ತಕ ಮನೆಯಲ್ಲಿ ಇಟ್ಟಿರುವುದಾಗಿ ಹೇಳುತ್ತಾರೆ. ರಿಮಾರ್ಕ್ ಪುಸ್ತಕದಲ್ಲಿ ಇಲ್ಲಿನ ಸಮಸ್ಯೆ ದಾಖಲು ಮಾಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಕ್ರಮ ತೆಗೆದುಕೊಳ್ಳಬೇಕೆಂದರು.
ಮಾಯಕೊಂಡ ಕ್ಷೇತ್ರದ ಅಂಗನವಾಡಿ ಕೇಂದ್ರಗಳಲ್ಲಿ ಇದೇ ರೀತಿಯ ಕಳಪೆ ಆಹಾರ ಪದಾರ್ಥ ಪೂರೈಸಲಾಗುತ್ತಿದೆ ಎಂದು ಪಾಲಕರಿಂದ ದೂರು ಬರುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕಳಪೆ ಆಹಾರ ಪೂರೈಸುವ ಏಜೆನ್ಸಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶದಿಂದ ಕೂಡಿದ ಆಹಾರ ಸಮರ್ಪಕವಾಗಿ ನೀಡುತ್ತಿಲ್ಲ. ಕಳಪೆ ಆಹಾರ ಪೂರೈಸಲಾಗುತ್ತಿದೆ. ಅಲ್ಲದೇ ಅಶುಚಿತ್ವ ಮತ್ತು ಮೂಲಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ ಎಂದರು.
ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳು ವಾರದಲ್ಲಿ ಒಂದು ಬಾರಿ ಅಂಗನವಾಡಿ ಕೇಂದ್ರಗಳಿಗೆ ನೀಡಿ ಆಹಾರದ ಗುಣಮಟ್ಟ ಪರೀಕ್ಷೆ ಮಾಡಬೇಕು ಎಂದು ತಾಕೀತು ಮಾಡಿದರು.
ಕಳಪೆ ಆಹಾರ ಸೇವಿಸಿ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದರೆ ಅಧಿಕಾರಿಗಳನ್ನು ಹೊಣೆಯನ್ನಾಗಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.